Breaking News
Home / Breaking News / ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ನಿರ್ದೇಶನ

ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ನಿರ್ದೇಶನ

ಬೆಳಗಾವಿ,): ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ(ಆ.11) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು.

ಖಾಸಗಿ ಆಸ್ಪತ್ರೆಯವರು ಕೂಡ ಕೋವಿಡ್ ಹಾಗೂ ಇತರೆ ಚಿಕಿತ್ಸೆ ನೀಡಲು ಮುಂದೆ ಬರುತ್ತಿದ್ದು, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಬೇಕು.

ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿದ ದರಪಟ್ಟಿಯ ಪ್ರಕಾರ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಿದರೆ ಆಯಾ ತಾಲ್ಲೂಕು ಪ್ರದೇಶಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಬಹುದು ಎಂದರು.

ನೂತನ ತಾಲ್ಲೂಕು ನಿಪ್ಪಾಣಿ ಆಸ್ಪತ್ರೆಗೂ ವೆಂಟಿಲೇಟರ್ ಪೂರೈಸುವಂತೆ ಸಚಿವರು ತಿಳಿಸಿದರು.
ಪ್ರತಿ ತಾಲ್ಲೂಕಿಗೆ ಒಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದರೆ ತುರ್ತು ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದರು.

ಇದು ಪರೀಕ್ಷೆ ಕಾಲವಾಗಿದೆ. ಆದ್ದರಿಂದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯೆ ಮಧ್ಯೆಯೂ ಜನರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದರು.

ಅದೇ ರೀತಿ ಪ್ರವಾಹ ನಿಯಂತ್ರಣ ಸಾಧಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು‌ ಎಂದು ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

ಪ್ರತಿ ತಾಲ್ಲೂಕಿನಲ್ಲಿ ಖಾಸಗಿ ಆಸ್ಪತ್ರೆಗೆ ಅನುಮತಿ ನೀಡಲು ಸಲಹೆ:

ಅಥಣಿ ಸೇರಿದಂತೆ ಕೆಲವು ಕಡೆ ಖಾಸಗಿ ಆಸ್ಪತ್ರೆಗಳು ಕೂಡ ಕೋವಿಡ್ ಚಿಕಿತ್ಸೆಗೆ ಮುಂದಾಗುತ್ತಿದ್ದು, ಅಂತಹವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲು ಪರಿಶೀಲಿಸಬೇಕು ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದರು.

ಖಾಸಗಿ ಆಸ್ಪತ್ರೆಗೆ ಅನುಮತಿ ನೀಡಿದರೆ ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.
ಪ್ರತಿ ತಾಲ್ಲೂಕಿಗೆ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ತಕ್ಷಣವೇ ಅನುಮತಿ ನೀಡಬೇಕು ಎಂದರು.

ಜಲಾಶಯಗಳಿಂದ ನೀರು ಬಿಡುಗಡೆ ಸಂದರ್ಭದಲ್ಲಿ ಸೂಕ್ತ ಸಮನ್ವಯ ಸಾಧಿಸಿದರೆ ಮಾತ್ರ ಪ್ರವಾಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಿದೆ. ಆದ್ದರಿಂದ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಶಾಸಕ ದುರ್ಯೋಧನ ಐಹೊಳೆ, ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ಆಸ್ಪತ್ರೆ ವ್ಯವಸ್ಥೆಯನ್ನು ತಾಲ್ಲೂಕು ಮಟ್ಟದಲ್ಲಿ ಕಲ್ಪಿಸಬೇಕು ಎಂದು ಹೇಳಿದರು.

ಮಾರ್ಗಸೂಚಿ ಪ್ರಕಾರ ಖಾಸಗಿ ಆಸ್ಪತ್ರೆಗೆ ಅನುಮತಿ-ಜಿಲ್ಲಾಧಿಕಾರಿ:

ಶೇ.40 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.
ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ತಾಲ್ಲೂಕುವಾರು ಸೋಂಕಿತರಿಗೆ ಆಯಾ ತಾಲ್ಲೂಕು ಆಸ್ಪತ್ರೆ ಮತ್ತು ಕೇಂದ್ರಗಳಲ್ಲಿ ಆರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

70 ಕ್ಕೂ ಅಧಿಕ ಸೋಂಕಿತ ಮಹಿಳೆಯರ ಹೆರಿಗೆ ಮಾಡಿಸಲಾಗಿದೆ.
ಪ್ರತಿದಿನ ರಾಜ್ಯಮಟ್ಟದಲ್ಲಿ ನಿಗದಿತ ಗುರಿಯಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇದಲ್ಲದೇ ತುರ್ತು ಚಿಕಿತ್ಸೆಗೆ ಅಗತ್ಯವಿದ್ದಾಗ ಸರಕಾರಿ ವೈದ್ಯಕೀಯ ತಂಡ ಖಾಸಗಿ ಆಸ್ಪತ್ರೆಗೇ ತೆರಳಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ಯಾನೆಲ್ ನಲ್ಲಿ ಇರುವ ಜಿಲ್ಲೆಯ 47 ಆಸ್ಪತ್ರೆಗಳಿಗೆ ಈಗಾಗಲೇ ನಿಗದಿಪಡಿಸಿದ ದರದಂತೆ ಬಿಲ್ ಪಾವತಿಸಲಾಗುವುದು.
ಇದಲ್ಲದೇ ಚಿಕಿತ್ಸೆಗೆ ಮುಂದಾಗುವ ಇತರೆ ಖಾಸಗಿ ಆಸ್ಪತ್ರೆಗಳಿಗೂ ಮಾರ್ಗಸೂಚಿ ಅನುಸರಿಸಿ ಅನುಮತಿ ನೀಡಲಾಗುವುದು ಎಂದರು.

ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಇನ್ನೆರಡು‌ ದಿನಗಳಲ್ಲಿ ರಾಜೀವ ಗಾಂಧಿ ವಸತಿ ನಿಗಮದಿಂದ ಎರಡನೇ ಕಂತು ಕೂಡ ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಸದ್ಯಕ್ಕೆ 371 ಸಕ್ರಿಯ ಪ್ರಕರಣಗಳಿವೆ ಬಿಮ್ಸ್ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್ ಸೌಲಭ್ಯ ಆಸ್ಪತ್ರೆಯಲ್ಲಿ ಇದೆ. ಇದುವರೆಗೆ 96 ಜನರು ಮರಣ ಹೊಂದಿರುತ್ತಾರೆ ಎಂದು ಬಿಮ್ಸ್ ನಿರ್ದೇಶಕ ವಿನಯ ದಾಸ್ತಿಕೊಪ್ಪ ತಿಳಿಸಿದರು.

ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಸದ್ಯಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಆದರೆ ನರ್ಸಿಂಗ್ ಸಿಬ್ಬಂದಿ ಕೊರತೆ ಇರುವುದರಿಂದ ನಿರಂತರವಾಗಿ ಶಿಫ್ಟ್ ಆಧಾರದ ಮೇಲೆ ನಿರ್ವಹಿಸಲಾಗುತ್ತಿದೆ.
ನರ್ಸಿಂಗ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ದಾಸ್ತಿಕೊಪ್ಪ ವಿವರಿಸಿದರು.

ಕೋವಿಡ್-೧೯ ಚಿಕಿತ್ಸೆಗೆ ಮುಂದಾಗುವ ಹಲವಾರು ಆಸ್ಪತ್ರೆಗಳ ವ್ಯವಸ್ಥೆಯನ್ನು ಈಗಾಗಲೇ ಪರಿಶೀಲಿಸಲಾಗಿದೆ. ನಿಯಮಾವಳಿ ಆಧರಿಸಿ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ನೀರಾವರಿ ಇಲಾಖೆಯ ಎಂಜಿನಿಯರ್ ಸಿ.ಡಿ.ಪಾಟೀಲ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
****

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *