Breaking News

ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ.

ಬೆಳಗಾವಿ, -ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಹವಾಮಾನ ಮತ್ತು ಮಳೆ-ಬೆಳೆಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಬುಧವಾರ (ಜು.26) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಪ್ರತಿವರ್ಷ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗುವುದರಿಂದ ಶಾಶ್ವತ ಪರ್ಯಾಯ ಮಾರ್ಗ ನಿರ್ಮಿಸುವುದು ಸೂಕ್ತವಾಗಿದೆ. ಆದ್ದರಿಂದ ಈ ಕುರಿತು ಪರಿಶೀಲಿಸಿ ವಿಸ್ತೃತವಾದ ವರದಿ ಕಳಿಸಬೇಕು. ಇದನ್ನು ಸರಕಾರದ ಹಂತದಲ್ಲಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಭೀಮಾ ಸೇರಿದಂತೆ ಪ್ರಮುಖ ನದಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಅತಿವೃಷ್ಟಿ ಮತ್ತು ಪ್ರವಾಹ ಸಂದರ್ಭಗಳಲ್ಲಿ ಮಾನವ ಜೀವಹಾನಿ ತಡೆಗಟ್ಟಲು ರಾಜ್ಯದ ಎಲ್ಲ ಜಿಲ್ಲೆಗಳ ಅಧಿಕಾರಿಗಳು ತಕ್ಷಣವೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಅಪಾಯದಮಟ್ಟ ಮೀರಿ ಹರಿಯುವ ನದಿಗಳು ಮತ್ತು ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಲ್ಲದೇ ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ನಿರ್ಬಂಧ ವಿಧಿಸಬಹುದು ಎಂದರು.
ಕಂದಾಯ, ಗ್ರಾಮೀಣಾಭಿವೃದ್ಧಿ, ಪೊಲೀಸ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡುವ ಮೂಲಕ ಮಾನವ ಜೀವಹಾನಿ ಕಡಿಮೆಗೊಳಿಸುವುದು ಸಾಧ್ಯವಾಗಲಿದೆ.
ಪ್ರತಿವರ್ಷ ಮುಳುಗಡೆಯಾಗುವ ನದಿತೀರದ ಗ್ರಾಮಗಳ ಶಾಶ್ವತ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಟ್ಟಡಗಳ ದುರಸ್ತಿಗೆ ಕಟ್ಟುನಿಟ್ಟಿನ ಸೂಚನೆ:

ಜಿಲ್ಲಾ-ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳು, ವಸತಿನಿಲಯಗಳು ಸೇರಿದಂತೆ ಸರಕಾರಿ ಕಟ್ಟಡಗಳನ್ನು ಪರಿಶೀಲಿಸಿ ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ದುರಸ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಏನಾದರೂ ಸಮಸ್ಯೆಯಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ರಾಜ್ಯ ವಿಪತ್ತು ನಿರ್ವಹಣಾ ಅನುದಾನದಡಿ ಕಟ್ಟಡಗಳ ದುರಸ್ತಿಗೆ ಅವಕಾಶವಿದ್ದು, ಈ ಅನುದಾನ ಬಳಸಿಕೊಂಡು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.
ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್. ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.

ರೈತರ ಸಾಲ ವಸೂಲಿಗೆ ಬಲವಂತ ಮಾಡುವಂತಿಲ್ಲ:

ಖಾಸಗಿ ಸೇರಿದಂತೆ‌ ಯಾವುದೇ ಬ್ಯಾಂಕುಗಳಿಂದ ರೈತರು ಪಡೆದುಕೊಂಡಿರುವ ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರವಾಹ ಸಂದರ್ಭದಲ್ಲಿ ಮಾನವ ಜೀವಹಾನಿ, ಜಾನುವಾರುಗಳ ಜೀವಹಾನಿ, ಸಾರ್ವಜನಿಕರ ಆಸ್ತಿ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನವನ್ನು ನೀಡಿದರು
ಕೆಲವೆಡೆ ಇನ್ನೂ ಬಿತ್ತನೆ ನಡೆಯಲಿರುವುದರಿಂದ ಅಗತ್ಯವಿರುವ ಬೀಜ, ಗೊಬ್ಬರವನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಪ್ರತಿಯೊಬ್ಬ ಅಧಿಕಾರಿಗಳು ಕೇಂದ್ರ ಸ್ಥಾನಗಳಿಯೇ ಇರಬೇಕು ಎಂದು ಸೂಚನೆ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಇಲ್ಲ:

ಕೃಷ್ಣಾ ನದಿಯಲ್ಲಿ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಒಳಹರಿವು ಇರುತ್ತದೆ. ಸದ್ಯಕ್ಕೆ ಪ್ರವಾಹ ಭೀತಿ ಇರುವುದಿಲ್ಲ.
ಬೈಲಹೊಂಗಲ ಮನೆ ಕುಸಿದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಕುಟುಂಬದ ವಾರಸುದಾರರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮುಖ್ಯಮಂತ್ರಿಗಳಿಗೆ ಮಾಹಿತಿಯನ್ನು ನೀಡಿದರು.

ಜಿಲ್ಲೆಯಲ್ಲಿ ಇದುವರೆಗೆ ಐದು ಮನೆಗಳು ಪೂರ್ಣವಾಗಿ ಕುಸಿದಿವೆ. 102 ಮನೆಗಳು ಭಾಗಶಃ ಹಾನಿಯಾಗಿರುತ್ತವೆ. ಸಂಪೂರ್ಣವಾಗಿ ಕುಸಿದಿರುವ ಮನೆಗಳಿಗೆ ಎನ್.ಡಿ‌.ಆರ್.ಎಫ್. ಮಾರ್ಗಸೂಚಿ ಪ್ರಕಾರ ತಲಾ 1.20 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿಯನ್ನು ನೀಡಿದರು.

ಜಿಲ್ಲೆಯಲ್ಲಿ ಒಟ್ಟು 30 ಕೆಳಹಂತದ ಸೇತುವೆಗಳು ಮುಳುಗಡಯಾಗಿರುತ್ತವೆ. ಆದರೆ ಪರ್ಯಾಯ ಮಾರ್ಗಗಳು ಇರುವುದರಿಂದ ಸಂಚಾರಕ್ಕೆ ಯಾವುದೇ ರೀತಿಯಾಗಿರುವುದಿಲ್ಲ.

ಸದ್ಯಕ್ಕೆ ಕೆ.ಆರ್.ಐ.ಡಿ.ಸಿ.ಎಲ್. ವತಿಯಿಂದ ಐದು ದೊಡ್ಡ ಸೇತುವೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಮತ್ತಷ್ಟು ಸಮಸ್ಯೆ ಬಗೆಹರಿಯಲಿದೆ.
ನಿಪ್ಪಾಣಿಯಲ್ಲಿ ವೇದಗಂಗಾ-ದೂಧಗಂಗಾ ನದಿಯ ಒಳಹರಿವು ಹೆಚ್ಚಾಗಿರುವುದರಿಂದ ಅಗತ್ಯವಿರುವ ಎರಡು ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕುಟುಂಬಗಳನ್ನು ಕೂಡ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಡಿಯೋ ಸಂವಾದದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಶಿಥಿಲಗೊಂಡಿರುವ ಅಂಗನವಾಡಿ ಕೇಂದ್ರಗಳು ಮತ್ತು ಶಾಲಾ ಕಟ್ಟಡಗಳನ್ನು ಕೂಡಲೇ ದುರಸ್ತಿಗೊಳಿಸಬೇಕು ಎಂದು ಸೂಚನೆ ನೀಡಿದರು.
ವಾಟರ್ ಫಾಲ್ಸ್ ಗಳ ಸಮೀಪ ಸಾರ್ವಜನಿಕ ಭೇಟಿಯನ್ನು ನಿರ್ಬಂಧಿಸಲಾಗಿದೆ. ಅಪಾಯಕಾರಿ ಸ್ಥಳಗಳಲ್ಲಿ ನಿಗಾ ವಹಿಸಬೇಕು ಎಂದು ತಿಳಿಸಿದರು.
ಪ್ರತಿಯೊಂದು ಇಲಾಖೆಯು ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಕೆಲಸ ಮಾಡಬೇಕು.
ಶಿಕ್ಷಣ, ಕೃಷಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚು ಜಾಗರೂಕತೆಯಿಂದ ಹಾಗೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾದರೆ ಕೂಡಲೇ ಅದಕ್ಕೆ ಸ್ಪಂದಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ಶಿಥಿಲವಾಗಿರುವ ಶಾಲಾ ಕಟ್ಟಡಗಳಲ್ಲಿ ತರಗತಿಗಳನ್ನು ನಡೆಸಬಾರದು. ದುರಸ್ತಿ ಬಳಿಕವೇ ತರಗತಿ ನಡೆಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮಾತನಾಡಿ, ಯಾವುದೇ ರೀತಿಯ ತುರ್ತು ಸಂದರ್ಭದಲ್ಲಿ 112 ದೂರವಾಣಿ ಸಂಖ್ಯೆಗೆ ಕರೆ ಮಾಡಿ‌ ಮಾಹಿತಿಯನ್ನು ನೀಡಿದರೆ ತಕ್ಷಣವೇ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 2682 ಮನೆಗಳ ಭಾಗಶಃ ಕುಸಿತ:

ರಾಜ್ಯದಲ್ಲಿ ಇದುವರೆಗೆ 38 ಮಾನವ ಜೀವಹಾನಿಯಾಗಿದೆ. 57 ಮನೆಗಳು ಸಂಪೂರ್ಣವಾಗಿ ಕುಸಿದಿದ್ದು, 2682 ಮನೆಗಳು ಭಾಗಶಃ ಕುಸಿದಿರುತ್ತವೆ.
185 ಹೆಕ್ಟೇರ್ ಕೃಷಿ ಬೆಳೆ ಹಾಗೂ 356 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟಾರೆ 541.39 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಜಲಾವೃತಗೊಂಡಿರುತ್ತದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದರು.
ಸಚಿವರಾದ ಜಿ.ಪರಮೇಶ್ವರ್, ಚಲುವರಾಯಸ್ವಾಮಿ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳಕರ್ ಮತ್ತಿತರರು ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಜತೆ ಉಪಸ್ಥಿತರಿದ್ದರು.

ಬೆಳಗಾವಿ ಪೊಲೀಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಉಪ ವಿಭಾಗಾಧಿಕಾರಿಗಳಾದ ರಾಜೇಶ್ ನಾಯಕ, ಪ್ರಭಾವತಿ ಫಕೀರಪೂರ ಸೇರಿದಂತೆ ಕೃಷಿ, ಆರೋಗ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ವಿಡಿಯೋ ಸಂವಾದ ವೇಳೆ ಹಾಜರಿದ್ದರು.
****

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *