ಬೆಳಗಾವಿ, – ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆಯನ್ನು ಮಾಡಬಹುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇವುಗಳ ಮೇಲೆ ನಿಗಾ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ತಿಳಿಸಿದರು.
ಗುರುವಾರ(ಜು.27) ಅತಿವೃಷ್ಟಿಯಿಂದ ಬಾಧಿತಗೊಂಡಿರುವ ಗ್ರಾಮಗಳು ಮತ್ತು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಚಿಕ್ಕೋಡಿಯ ಲೋಕೋಪಯೋಗಿ ಇಲಾಖೆಯ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯ ಪ್ರಮಾಣ ಮತ್ತು ಮಹಾರಾಷ್ಟ್ರದಿಂದ ನೀರು ಬಿಡುಗಡೆ ಕುರಿತು ಅಲ್ಲಿಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದುಕೊಂಡು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಪ್ರವಾಹದಿಂದ ಉಂಟಾಗುವ ಮನೆಹಾನಿಯ ಸಮೀಕ್ಷೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಇದಲ್ಲದೇ ಮಾನವ ಜೀವಹಾನಿ ಹಾಗೂ ಪ್ರಾಣಿಗಳ ಜೀವಹಾನಿಯಾದಾಗ ತುರ್ತಾಗಿ ಪರಿಹಾರಧನವನ್ನು ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಪ್ರವಾಹದ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ.
ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಪ್ರವಾಹ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಪ್ರವಾಹ ಹಾನಿ ತಡೆಗಟ್ಟಲು ಆದ್ಯತೆ ನೀಡಬೇಕು:
ಪ್ರವಾಹದ ಬಳಿಕ ಪುನರ್ವಸತಿ ಕಲ್ಪಿಸುವುದರ ಬದಲಾಗಿ ಮುಂಚಿತವಾಗಿಯೇ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡಬೇಕು.
ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಶಿಥಿಲಗೊಂಡಿರುವ ಮನೆಗಳನ್ನು ಪರಿಶೀಲಿಸಿ ಕುಟುಂಬಗಳಿಗೆ ಈ ಬಗ್ಗೆ ಎಚ್ಚರಿಕೆ ನೀಡಬೇಕು. ಸಾಧ್ಯವಿರುವ ಕಡೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
2019 ರಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ಕುರಿತು ಸಮರ್ಪಕವಾಗಿ ದತ್ತಾಂಶ ದಾಖಲೆಯಾಗಿರಲಿಲ್ಲ. ಆದ್ದರಿಂದ ಮನೆಹಾನಿಗಿರುವುದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕೈಗೊಂಡಾಗ ಕೆಟಗರಿವಾರು ನಿಖರ ಮಾಹಿತಿಯನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.
ಅತಿವೃಷ್ಟಿ ಹಾಗೂ ಪ್ರವಾಹದ ಬಳಿಕ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ನೀರು ಕಡಿಮೆಯಾದ ಬಳಿಕ ಪ್ರವಾಹದಿಂದ ಬಾಧಿತಗೊಂಡಿರುವ ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಬೇಕು.
ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ಪೊಲೀಸ್ ಈ ಮೂರು ಇಲಾಖೆಗಳ ಸಮನ್ವಯತೆ ಬಹಳ ಪ್ರಮುಖವಾಗಿರುತ್ತದೆ. ಆದ್ದರಿಂದ ಈ ಕುರಿತು ಗಮನಹರಿಸಬೇಕು ಎಂದು ತಿಳಿಸಿದರು.
ಮರುಬಿತ್ತನೆಗೆ ಬೀಜ ಪೂರೈಕೆಗೆ ಸೂಚನೆ:
ಈಗಾಗಲೇ ಬಿತ್ತನೆ ಮಾಡಿ ಬೆಳೆಹಾನಿಯಾಗಿರುವುದರಿಂದ ಕೆಲ ರೈತರು ಮತ್ತೊಮ್ಮೆ ಬಿತ್ತನೆ ಬೀಜ ಒದಗಿಸುವಂತೆ ಕೋರುತ್ತಿದ್ದಾರೆ. ಆದ್ದರಿಂದ ಅಂತಹ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ಒದಗಿಸಬೇಕು ಎಂದು ಅಂಜುಮ್ ಪರ್ವೇಜ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಶೇ.100 ರಷ್ಟು ಬಿತ್ತನೆ ಆಗಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಬೀಜ ಪೂರೈಕೆಯಲ್ಲಿ ತೊಂದರೆಯಾಗಬಾರದು. ಆದ್ದರಿಂದ ಅಗತ್ಯ ಬೀಜ-ಗೊಬ್ಬರಗಳ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಬಿತ್ತನೆ ಬೀಜ-ಗೊಬ್ಬರ ಪೂರೈಕೆಗೆ ಕ್ರಮ-ಜಿಲ್ಲಾಧಿಕಾರಿ ನಿತೇಶ್ ಪಾಟೀಲ:
ಸದ್ಯಕ್ಕೆ 1.61 ಲಕ್ಷ ಕ್ಯೂಸೆಕ್ ನೀರು ಆಲಮಟ್ಟಿ ಜಲಾಶಯದ ಒಳಹರಿವು ಇದೆ. 2.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದರೆ ಮಾತ್ರ ಪ್ರವಾಹ ಭೀತಿ ಎದುರಾಗುತ್ತದೆ. ಸದ್ಯಕ್ಕೆ ಅಷ್ಟೊಂದು ಒಳಹರಿವು ಇರುವುದಿಲ್ಲ. ಆದ್ದರಿಂದ ಪ್ರವಾಹ ಭೀತಿ ಸದ್ಯಕ್ಕಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲೆಯಲ್ಲಿ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಎಲ್ಲ ಕಡೆ ಪರ್ಯಾಯ ಮಾರ್ಗಗಳಿವೆ. ಆದಾಗ್ಯೂ ಮುಖ್ಯಮಂತ್ರಿಗಳು ನೀಡಿರುವ ಸೂಚನೆ ಮೇರೆಗೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದರು.
ಮಣ್ಣಿನ ಮನೆಗಳು ಕುಸಿಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಇಂತಹ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಸುರಕ್ಷಿತ ಮನೆಗಳಲ್ಲಿ ವಾಸಿಸಬೇಕು ಎಂದು ಪ್ರತಿಯೊಂದು ಪಂಚಾಯಿತಿಗಳಲ್ಲಿ ಡಂಗುರದ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಇತ್ತೀಚಿನ ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದರು.
ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಸಮರ್ಪಕ ದಾಸ್ತಾನು ಇರುತ್ತದೆ. ರೈತರ ಬೇಡಿಕೆಯ ಪ್ರಕಾರ ತಕ್ಷಣವೇ ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸದ್ಯಕ್ಕೆ ಕುಡಿಯುವ ನೀರಿನ ಕೊರತೆ ಇರುವುದಿಲ್ಲ. ಕೆಲ ದಿನಗಳ ಹಿಂದಷ್ಟೇ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು. ಇದೀಗ ಅವುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಶುಭಂ ಶುಕ್ಲಾ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವೇದಗಂಗಾ-ದೂಧಗಂಗಾ ನದಿ ಪ್ರವಾಹದಿಂದ ಬಾಧಿತವಾಗಿರುವ ನಿಪ್ಪಾಣಿ ತಾಲ್ಲೂಕಿನ ಬಾರವಾಡ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಊಟ ಮತ್ತಿತರ ಸೌಕರ್ಯಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುತ್ತಿರುವುದರಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.ಇ
ದಲ್ಲದೇ ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡಿರುವವರಿಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಅವಕಾಶ ನೀಡಬೇಕು. ಆದರೆ ಜಿಪಿಎಸ್ ತಾಂತ್ರಿಕ ಕಾರಣದಿಂದ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬೇರೆ ಕಡೆ ಸುರಕ್ಷಿತ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಂಜುಮ್ ಪರ್ವೇಜ್ ಭರವಸೆ ನೀಡಿದರು.
ಯಮಗರಣಿ ಬಳಿ ಪ್ರವಾಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಆಗುವ ಬಗ್ಗೆ ಪರಿಶೀಲಿಸಿದರು
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಗಿತ್ತೆ, ಬಾರವಾಡ ಗ್ರಾಮ ಪಂಚಾಯತಿ ಪ್ರವಾಹ ನೋಡಲ್ ಅಧಿಕಾರಿ ರಾಮಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
***