ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲಹೆಯನ್ನು ನೀಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್ ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ನಾಲ್ಕು ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಕುಮಾರಸ್ವಾಮಿ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಸಲಹೆ ಸಲ್ಲಿಸಲಾಗುವುದು ಎಂದರು.
ರಾಜ್ಯಪಾಲರು ಸಲಹೆಯನ್ನು ನಿರಾಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್, ರಾಜ್ಯಪಾಲರ ವಿವೇಚನಾ ಅಧಿಕಾರಿ ಸೀಮಿತವಾಗಿದ್ದು, ನಮ್ಮ ಸಲಹೆಗೆ ಬದ್ಧವಾಗಿರಬೇಕು. ಅವರು ತಮ್ಮ ಅಧಿಕಾರವನ್ನು ಬಹಳ ವಿವೇಚನೆಯಿಂದ ಚಲಾಯಿಸುವ ಖಾತ್ರಿಯಿದೆ. ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. “ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19,17 ಎ ಮತ್ತು ಈಗ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 197 ಮತ್ತು 218 ಆಗಿರುವ ಅಪರಾಧ ಪ್ರಕ್ರಿಯೆ ಸಂಹಿತೆಯಡಿ ಅನುಮತಿ ಕೋರಲಾಗಿದೆ ಎಂದು ತಿಳಿಸಿದರು.