ಬೆಂಗಳೂರು, ಸೆಪ್ಟೆಂಬರ್ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ತೀರ್ಮಾನವನ್ನು ಕೋರ್ಟ್ ಎತ್ತಿ ಹಿಡಿದಿದೆ.
ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಈ ಕುರಿತು ತೀರ್ಪು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ವಿಚಾರಣೆಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಕರ್ನಾಟಕ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ವಿವರವಾದ ವಾದ-ವಿವಾದ ಆಲಿಸಿದ್ದ ನ್ಯಾಯಪೀಠ ಸೆಪ್ಟೆಂಬರ್ 24ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು.
ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿದೆ. ಮುಖ್ಯಮಂತ್ರಿಗಳ ಕುಟುಂಬಸ್ಥರು ಇದರ ಫಲಾನುಭವಿಗಳಾಗಿದ್ದಾರೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ