ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ. ಆದರೆ ಮುಂಗಾರು ಪೂರ್ವದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ 2025ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಈ ಸಭೆಯಲ್ಲಿ ಭಾಗವಹಿಸಿದ್ದರು.
“ಪೂರ್ವ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುತ್ತದೆ. ಫೆಬ್ರವರಿ ಮತ್ತು ಮಾರ್ಚ್ ಕೊನೆಯ ವಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಆದಾಗ್ಯೂ, ಹಿಂಗಾರಿನಲ್ಲಿ ಮಳೆ ಸರಾಸರಿಗಿಂತ ಕಡಿಮೆಯಾಗಿದೆ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ” ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.