ಬೆಳಗಾವಿ- 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರು ನಡೆಸಿದ ಕಾಂಗ್ರೆಸ್ ಮಹಾ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಡಿಸೆಂಬರ್ 26 ಹಾಗೂ 27 ರಂದು ಬೆಳಗಾವಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದ ಕಾರ್ಯಕ್ರಮವನ್ನಾಗಿಸಲು ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರ ದಂಡು ಬೆಳಗಾವಿಗೆ ಆಗಮಿಸಿದೆ.
ಇಂದು ಮಂಗಳವಾರ ಬೆಳಿಗ್ಗೆ 11-00 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ರವರು, ರಣದೀಪ್ ಸಿಂಗ್ ಸುರ್ಜೇವಾಲ ರವರು, ಮಾನ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಮತ್ತು ರಾಜ್ಯದ ಪ್ರಭಾವಿ ನಾಯಕ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ.
ಇಂದು ಮಂಗಳವಾರ 11-00 ಗಂಟೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ಬೆಳಗಾವಿ ವಿಭಾಗದ ಜಿಲ್ಲೆಗಳ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2024ರ ಲೋಕಸಭಾ ಅಭ್ಯರ್ಥಿಗಳು, 2023ರ ವಿಧಾನಸಭಾ ಅಭ್ಯರ್ಥಿಗಳು, ಡಿಸಿಸಿ ಅಧ್ಯಕ್ಷರು, ನಿಗಮ ಮಂಡಳಿ ಅಧ್ಯಕ್ಷರು, ಎಐಸಿಸಿ/ಕೆಪಿಸಿಸಿ ಸದಸ್ಯರು, ಕೆಪಿಸಿಸಿ ಸಂಯೋಜಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಎಲ್ಲ ಮುಂಚೂಣಿ ಘಟಕ, ಸೆಲ್ ವಿಭಾಗದ ಜಿಲ್ಲಾಧ್ಯಕ್ಷರುಗಳನ್ನು ಪೂರ್ವಭಾವಿ ಸಭೆಗೆ ಆಹ್ವಾನಿಸಲಾಗಿದೆ.