ರುಕ್ಮಿಣಿ ನಗರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ,ಗುಡಿಸಲು ನಿವಾಸಿಗಳಿಗೆ ವಸತಿ ಕಲ್ಪಿಸಲು ಸೂಚನೆ
ಬೆಳಗಾವಿ, – ರುಕ್ಮಿಣಿ ನಗರದಲ್ಲಿ ಪಾಲಿಕೆಯ ಜಾಗೆಯಲ್ಲಿ ಗುಡಿಸಲುಗಳಲ್ಲಿ ವಾಸಿಸುವ ಕುಟುಂಬಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ರುಕ್ಮಿಣಿ ನಗರಕ್ಕೆ ಬುಧವಾರ (ಫೆ.23) ಭೇಟಿ ನೀಡಿ ಪರಿಶೀಲಿಸಿದ ಅವರು, ಸ್ಥಳೀಯ ಜನರ ಅಹವಾಲುಗಳನ್ನು ಆಲಿಸಿದರು.
ಕುಡಿಯುವ ನೀರು ಪೂರೈಕೆ, ಸ್ವಚ್ಛತೆಗೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಅವರು, ಜನರ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ:
ರುಕ್ಮಿಣಿ ನಗರದಲ್ಲಿ ಪಾಲಿಕೆಯ ಜಾಗೆಯಲ್ಲಿ ಅಂದಾಜು 400 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿವೆ. ಈ ಕುಟುಂಬಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಕೂಡಲೇ ಸಭೆಯನ್ನು ನಡೆಸಿ ಮಾಹಿತಿಯನ್ನು ಒದಗಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಲ್.ಲಮಾಣಿ ಅವರು, ಪಾಲಿಕೆಯ ವತಿಯಿಂದ ಜಾಗೆಯನ್ನು ಒದಗಿಸಿದರೆ ಆದಷ್ಟು ಬೇಗನೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಾಹಿತಿಯನ್ನು ಪಡೆದುಕೊಂಡರು.
ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಂಭುಲಿಂಗಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
*****