ಕೇಂದ್ರಸರಕಾರದ ಯೋಜನೆಗಳ ಫಲಾನುಭವಿಗಳ ಜತೆ ಸಚಿವ ಸೋಮ ಪ್ರಕಾಶ್ ಸಂವಾದ ನಾಳೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ನಿತೇಶ್ ಪಾಟೀಲ
ಬೆಳಗಾವಿ,: ಕೇಂದ್ರ ಸರಕಾರವು ಕಳೆದ ಎಂಟು ವರ್ಷಗಳಲ್ಲಿ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ಸೋಮವಾರ(ಜೂ.27) ಸಂವಾದ ನಡೆಸಲಿದ್ದಾರೆ.
ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ್ ಯೋಜನೆ, ಜಲಜೀವನ ಮೀಷನ್, ಆಯುಷ್ಮಾನ್ ಭಾರತ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪೋಷಣ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ, ಸ್ವಚ್ಛಭಾರತ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಒಂದು ದೇಶ; ಒಂದು ರೇಷನ್ ಕಾರ್ಡ್ ಯೋಜನೆ; ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದಾರೆ.
ಇದಾದ ಬಳಿಕ ಕೇಂದ್ರ ಸಚಿವರು ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಮಾರನೇ ದಿನ ಮಂಗಳವಾರ(ಜೂ.28) ಬೆಳಗಾವಿ ಕೋಟೆ; ಪಡಿತರ ವಿತರಣಾ ಅಂಗಡಿ, ಬಿಮ್ಸ್ ಜನೌಷಧಿ ಕೇಂದ್ರಕ್ಕೆ ಭೇಟಿ ನೀಡುವರು.
ಇದಲ್ಲದೇ ಅಗಸಗ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಮೃತ ಸರೋವರ ಕಾಮಗಾರಿ ಪರಿಶೀಲನೆ ಹಾಗೂ ಅಗಸಗಿ ಮತ್ತು ಕಡೋಲಿ ಗ್ರಾಮದಲ್ಲಿ ನರೇಗಾ ಯೀಜನೆಯಡಿ ಕೈಗೊಂಡ ಶಾಲಾಭಿವೃದ್ಧಿ ಕಾಮಗಾರಿ ವೀಕ್ಷಿಸಲಿದ್ದಾರೆ.
ಕೇಂದ್ರ ಸರಕಾರವು ಕಳೆದ ಎಂಟು ವರ್ಷಗಳಲ್ಲಿ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳನ್ನು ಈಗಾಗಲೇ ಗುರುತಿಸಿ ಯೋಜನೆವಾರು ಪಟ್ಟಿಯನ್ನು ಸಿದ್ಧಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಫಲಾನುಭವಿಗಳನ್ನು ಕರೆತರಲು ಆಯಾ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾನ್ನಾಗಿ ನಿಯೋಜಿಸಲಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಸ್ಥಳಗಳಲ್ಲಿ ಕೇಂದ್ರ ಸಚಿವರು ಈ ರೀತಿಯ ಸಂವಾದವನ್ನು ನಡೆಸುತ್ತಿದ್ದು, ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ಕೆಲವು ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಹಾಗೂ ಪ್ರಮಾಣಪತ್ರಗಳನ್ನು ಕೂಡ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೇರಿದಂತೆ ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳು ಉಪಸ್ಥಿತರಿರುವರು.
***