ಬೆಳಗಾವಿ, ಜೂ.29(ಕರ್ನಾಟಕ ವಾರ್ತೆ): ಕ್ರಿಯಾಯೋಜನೆ ಅನುಮೋದನೆಯಾದ ಕೂಡಲೇ ಆ ಪ್ರಕಾರ ಪ್ರತಿಯೊಂದು ಇಲಾಖೆಯು ಶೇಕಡ ನೂರರಷ್ಟು ಆರ್ಥಿಕ ಮತ್ತು ಭೌತಿಕ ಸಾಧನೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜೂ.29) ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2022-23 ನೇ ಸಾಲಿನ ಮೇ ಮಾಹೆವರೆಗಿನ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರ ಕಾಲನಿಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್. ಪಿ. ಯೋಜನೆಯಡಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಗಾಲ ಆರಂಭಗೊಂಡಿರುವುದರಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ತುರ್ತು ಸಂದರ್ಭಗಳಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು.
ಯಾವುದೇ ಅಧಿಕಾರಿಗಳು ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನದಿಂದ ಹೊರಗಡೆ ಹೋಗುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇತರೆ ಇಲಾಖೆಗಳ ಜತೆ ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಈಗಾಗಲೇ ಗುರುತಿಸಲಾಗಿರುವ ಕಾಳಜಿ ಕೇಂದ್ರಗಳನ್ನು ಒಮ್ಮೆ ಪರಿಶೀಲಿಸಬೇಕು. ಅದೇ ರೀತಿ ಜಾನುವಾರು ಕೇಂದ್ರಗಳ ಸ್ಥಾಪನೆ ಮತ್ತು ಮೇವು ಸಂಗ್ರಹ ಕುರಿತು ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ ಅವರು ರಾಜ್ಯ ಕ್ರಿಯಾ ಯೋಜನೆ ಅನುಮೋದನೆಯಾಗಿದೆ. ಬಹುತೇಕ ಇಲಾಖೆಗಳ ಜಿಲ್ಲಾಮಟ್ಟದ ಕ್ರಿಯಾ ಯೋಜನೆ ಇನ್ನೂ ಅನುಮೋದನೆಗೊಂಡಿರುವುದಿಲ್ಲ ಎಂದು ಸಭೆಗೆ ತಿಳಿಸಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ಚರ ಉಳ್ಳಾಗಡ್ಡಿ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
****