Breaking News

ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ-ಡಿಸಿ

ಬೆಳಗಾವಿ, – ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಎರಡನೇ ಹಂತದಲ್ಲಿ‌ ನಡೆಯಲಿರುವ ಗ್ರಾಮ‌ ಪಂಚಾಯತಿ ಚುನಾವಣೆಯ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪರಿಶೀಲಿಸಿದರು.

ಅಥಣಿ, ಕಾಗವಾಡ, ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಿಗೆ ಭಾನುವಾರ (ಡಿ.20) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸಿದ್ಧತೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಚುನಾವಣೆಗೆ ನಿಯೋಜಿತಗೊಂಡು ತರಬೇತಿ ಪಡೆಯುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ತುರುಸಿನ ಪೈಪೋಟಿ ಕಂಡುಬರುವುದರಿಂದ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು.

ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ನ್ಯಾಯಸಮ್ಮತ ಮತ್ತು ಪಾರ್ದರ್ಶಕ ಚುನಾವಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯತಿ ಚುನಾವಣೆಗೆ ಮೊದಲ ಹಂತದಲ್ಲಿ ಡಿ‌.22 ರಂದು ಹಾಗೂ ಎರಡನೇ ಹಂತದಲ್ಲಿ ಡಿ.27 ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗಳು ಮತ್ತು ನಿಯಮಾವಳಿ ಪಾಲನೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗಿದ್ದು, ಆದಾಗ್ಯೂ ಸಂದೇಹಗಳು ಬಂದರೆ ಕೂಡಲೇ ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಅಥಣಿ, ಚಿಕ್ಕೋಡಿ, ಕಾಗವಾಡ ಮತ್ತು ನಿಪ್ಪಾಣಿ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳ ಜತೆ ಅವರು ಚರ್ಚಿಸಿದರು.
ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
******

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *