ಬೆಳಗಾವಿ,- ಲೋಕಸಭಾ ಉಪಚುನಾವಣೆ ಮಂಗಳವಾರ(ಮಾ.16) ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ.
ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ಪಾಲನೆ ಸೇರಿದಂತೆ ಎಲ್ಲ ತಂಡಗಳು ಸಕ್ರಿಯವಾಗಿ ಕಾರ್ಯಾರಂಭಿಸಬೇಕು ಎಂದು ತಿಳಿಸಿದರು.
80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಹಾಗೂ ವಿಕಲಚೇತನರಿಗೆ ಪೋಸ್ಟಲ್ ಬ್ಯಾಲೆಟ್ (ಅಂಚೆ ಮತಪತ್ರ) ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ನೀತಿಸಂಹಿತೆ ಜಾರಿಗೆ ಬಂದಿರುವುದರಿಂದ ಮುಂದಿನ ಇಪ್ಪತ್ನಾಲ್ಕು ಗಂಟೆಯಲ್ಲಿ ಸರ್ಕಾರದ ಸಾಧನೆ ಬಿಂಬಿಸುವಂತಹ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್., ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕೋಡಿ, ಬೈಲಹೊಂಗಲ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
****