Breaking News

ಬೆಳಗಾವಿ ಜಿಲ್ಲೆಯ ಪ್ರಗತಿ ಪರಶೀಲಿಸಿದ ಸಕ್ರೇಟರಿ…

ಬೆಳಗಾವಿ, – ಬೆಳಗಾವಿ ನಗರದಲ್ಲಿ ಸಮರ್ಪಕ ಕಸ ವಿಂಗಡಣೆ ಮತ್ತು ವಿಲೇವಾರಿಗೆ ಕ್ರಮಕೈಗೊಳ್ಳಬೇಕು. ಪ್ರತಿ ಮನೆಗೆ ನೀಲಿ ಹಾಗೂ ಹಸಿರು ಡಸ್ಟ್ ಬಿನ್ ಗಳನ್ನು ಪಾಲಿಕೆ ವತಿಯಿಂದಲೇ ಪೂರೈಸಿ ಅದರ ವೆಚ್ಚವನ್ನು ಆಸ್ತಿ ತೆರಿಗೆಯಲ್ಲಿ ಸೇರ್ಪಡೆ ಮಾಡುವ ಕುರಿತು ಪರಿಶೀಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ (ಜು.16) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ವತಿಯಿಂದಲೇ ಒಣ ಹಾಗೂ ಹಸಿ ಕಸಕ್ಕಾಗಿ ಪ್ರತ್ಯೇಕ ಡಸ್ಟ್ ಬಿನ್ ಗಳನ್ನು ಪ್ರತಿ ಮನೆಗಳಿಗೆ ಪೂರೈಸಿದರೆ ಕಸ ವಿಂಗಡಣೆ ಸುಲಭವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪಿಎಂಜಿಎಸ್ ವೈ ಯೋಜನೆಯಡಿ ನಿರ್ಮಿಸಲಾಗಿರುವ ರಸ್ತೆಗಳ ಎರಡೂ ಬದಿಗೆ ನರೇಗಾ ಕಾರ್ಯಕ್ರಮದಡಿಯಲ್ಲಿ ಸಸಿಗಳನ್ನು ನೆಡಬೇಕು ಎಂದು ನಿರ್ದೇಶನ ನೀಡಿದರು.
ಅದೇ ರೀತಿ ನಗರದಲ್ಲಿ ಸ್ಮಾರ್ಟ್ ಸಿಟಿ ಅನುದಾನದಡಿಯಲ್ಲಿ ಸಸಿಗಳನ್ನು ನೆಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಂಭವನೀಯ ಕೋವಿಡ್ ಮೂರನೇ ಅಲೆಯ ನಿರ್ವಹಣೆಗೆ ಸಂಬಂಧಿಸಿದಂತೆ ಅದರಲ್ಲೂ ವಿಶೇಷವಾಗಿ ಮಕ್ಕಳ ರಕ್ಷಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಸೋಂಕಿತ ಮಕ್ಕಳ ಚಿಕಿತ್ಸೆ ಸಂದರ್ಭದಲ್ಲಿ ತಾಯಿಯೂ ಜತೆಗೆ ಇರಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆ ಮಾಡಿಕೊಳ್ಳಬೇಕು.

ಜಾನುವಾರುಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಖರೀದಿಗೆ ಪಶುಪಾಲನೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.
ಜಾನುವಾರು ಲಸಿಕಾಕರಣ ಕಾರ್ಯಕ್ರಮದಲ್ಲಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.
ಜು.19 ಹಾಗೂ 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಬೇಕು.

ಜಿಲ್ಲೆಯಲ್ಲಿ ಕೆಆರ್ ಐಡಿ ಎಲ್ ಸಂಸ್ಥೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಕಟ್ಟಡ ಹಾಗೂ ರಸ್ತೆ ಕಾಮಗಾರಿಗಳ ಪ್ರಗತಿಯ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಿದರು..

ಸಣ್ಣ ನೀರಾವರಿ, ಕೃಷಿ, ಸಾಮಾಜಿಕ ಅರಣ್ಯ ಇಲಾಖೆಯವರು ಪರಸ್ಪರ ಸಮನ್ವಯತೆಯೊಂದಿಗೆ ಸಣ್ಣ ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅತೀಕ್ ತಿಳಿಸಿದರು.

ಸದ್ಯಕ್ಕೆ ಪ್ರವಾಹ ಭೀತಿ ಇಲ್ಲ:

ಜಿಲ್ಲೆಯಲ್ಲಿ ಜುಲೈ‌ ಮಾಹೆಯಲ್ಲಿ ವಾಡಿಕೆಗಿಂತ ಕಡಿಮೆ‌ ಮಳೆಯಾಗಿದೆ. ಮಹಾರಾಷ್ಟ್ರದ ಕೊಯ್ನಾ ಶೇ.44 ರಷ್ಟು ಮಾತ್ರ ಭರ್ತಿಯಾಗಿರುವುದರಿಂದ ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ಇರುವುದಿಲ್ಲ.
ಪ್ರವಾಹ ಬಾಧಿತಗೊಳ್ಳಬಹುದಾದ ನದಿತೀರದ 377 ಗ್ರಾಮಗಳಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವಿವರಿಸಿದರು.
ಜಾನುವಾರುಗಳ ರಕ್ಷಣೆಗಾಗಿ 208 ಕೇಂದ್ರಗಳನ್ನು ಕೂಡ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಿಂಧುತ್ವ ಪ್ರಮಾಣಪತ್ರಗಳು ತಕ್ಷಣವೇ ನೀಡಲು ಅನುಕೂಲವಾಗುವಂತೆ ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರತಿವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಮಹಾನಗರ ಪಾಲಿಕೆಯ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬಳ್ಳಾರಿ ನಾಲಾದಿಂದ ಬಾಧಿತಗೊಳ್ಳುವ ಜನರ ತಾತ್ಕಾಲಿಕ ಸ್ಥಳಾಂತರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ತಿಳಿಸಿದರು.

ಬ್ಲ್ಯಾಕ್ ಫಂಗಸ್-134 ಸಕ್ರಿಯ ಪ್ರಕರಣ:

ವಿದ್ಯಾರ್ಥಿಗಳ ಪೈಕಿ ಶೇ.64.14 ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಇದಲ್ಲದೇ ಖಾಸಗಿ ಸಂಸ್ಥೆಗಳಲ್ಲೂ ಕೂಡ ಅನೇಕ ಜನರು ಲಸಿಕೆ ಪಡೆದುಕೊಂಡಿದ್ದಾರೆ ಎಂದು ಆರ್.ಸಿ.ಎಚ್.ಓ. ಡಾ.ಐ.ಪಿ.ಗಡಾದ ತಿಳಿಸಿದರು.

ಪ್ರತಿದಿನ ಕನಿಷ್ಠ ಐವತ್ತು ಸಾವಿರ ಲಸಿಕೆ ಪೂರೈಕೆಯಾದರೆ ಲಸಿಕಾಕರಣ ಇನ್ನಷ್ಟು ಚುರುಕುಗೊಳಿಸಿ ಹೆಚ್ಚಿನ ಪ್ರಗತಿ ಸಾಧಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಗಮನಸೆಳೆದರು.
ಗಡಿ ಮೂಲಕ ಪ್ರತಿದಿನ ಸಂಚರಿಸುವ ಜನರಿಗೂ ಕಡ್ಡಾಯವಾಗಿ ಲಸಿಕೆ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ತಿಳಿಸಿದರು.

ಜಿಲ್ಲೆಯಾದ್ಯಂತ 427 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. 197 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, 67 ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿರುತ್ತದೆ ಎಂದು ಸಭೆಗೆ ತಿಳಿಸಿದರು.
134 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 39 ಜನರು ಆಕ್ಸಿಜನ್ ಪಡೆಯುತ್ತಿದ್ದಾರೆ ಎಂದು ಬಿಮ್ಸ್ ಡಾ.ದಂಡಗಿ ಹೇಳಿದರು.

ಕೋವಿಡ್ 3 ನೇ ಅಲೆ ನಿರ್ವಹಣೆಗೆ ಸಿದ್ಧತೆ:

ಸಂಭವನೀಯ ಕೋವಿಡ್ ಮೂರನೇ ಅಲೆಯ ಹಿನ್ನೆಲೆಯಲ್ಲಿ ಖಾಸಗಿ ವಲಯದಲ್ಲಿ 39 ಚಿಕ್ಕಮಕ್ಕಳ ಆಸ್ಪತ್ರೆಗಳಲ್ಲಿ 913 ಹಾಸಿಗೆಗಳನ್ನು ಗುರುತಿಸಲಾಗಿದೆ.
ಅದೇ ರೀತಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳ ಚಿಕಿತ್ಸೆಗೆ ಅನುಕೂಲವಾಗುವಂತೆ 150 ಕ್ಕೂ ಅಧಿಕ ಹಾಸಿಗೆಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ಹತ್ತು ಹಾಸಿಗೆಗಳನ್ನು ಸಿದ್ಧಪಡಿಸಿಟ್ಟಕೊಳ್ಳಲಾಗಿದೆ ಎಂದು ಡಿಎಚ್ಓ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.
ಮಕ್ಕಳ ಚಿಕಿತ್ಸೆಗೆ ಅತ್ಯಗತ್ಯವಾದ ಔಷಧಿಯನ್ನು ಕೂಡ ದಾಸ್ತಾನು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 21 ಸಾವಿರಕ್ಕೂ ಅಧಿಕ ವಿಕಲಚೇತನರಿಗೆ ಲಸಿಕೆ ಒದಗಿಸಲಾಗಿದೆ. ಇನ್ನೂ ಸುಮಾರು 15 ಸಾವಿರ ಜನರಿಗೆ ಲಸಿಕೆ ನೀಡಬೇಕಿದ್ದು, ಲಸಿಕೆ ಪೂರೈಕೆ ಆಧರಿಸಿ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ತಿಳಿಸಿದರು.

ಶೇ.88 ರಷ್ಟು ಬಿತ್ತನೆಯಾಗಿದೆ. ಬೀಜ-ಗೊಬ್ಬರ ಪೂರೈಕೆಯಲ್ಲಿ ಯಾವುದೇ ತೊಂದರೆಯಿಲ್ಲ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಎಚ್.ಡಿ.ಕೋಳೇಕರ ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ 22,719 ರೈತರ ಪೈಕಿ 15420 ಜನರಿಗೆ ಈಗಾಗಲೇ 5.63 ಕೋಟಿ ರೂಪಾಯಿ ನೆರವು ತಲುಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟಿ ತಿಳಿಸಿದರು.

ಸದ್ಯಕ್ಕೆ ಅಂಗನವಾಡಿ ಕೇಂದ್ರಗಳು ಬಂದ್ ಇರುವುದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮನೆಗೆ ಪೌಷ್ಟಿಕಾಹಾರ ವಿತರಿಸಲಾಗುತ್ತಿದೆ.
ಪುಷ್ಟಿ ಹಾಗೂ ಹಾಲಿನ ಪೌಡರ್ ಅನ್ನು ಕೂಡ ಮಕ್ಕಳಿಗೆ ಒದಗಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ ವರವಟ್ಟಿ ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ವಿವಿಧ ಇಲಾಖೆಯ ಸಮನ್ವಯತೆಯೊಂದಿಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

30 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯತಿ ಗಳಿಗೆ ಇಲಾಖೆಯ ವತಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಇದುವರೆಗೆ ಕಾಮಗಾರಿಗಳು ಆರಂಭಗೊಂಡಿರುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಈ ಬಾರಿ ಅರಣ್ಯೀಕರ ಯೋಜನೆಯಲ್ಲಿ ಶೇ.50 ಕ್ಕೂ ಅಧಿಕ ಹಣ್ಣಿನ ಮರಗಳ ಸಸಿಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಉಪಸ್ಥಿತರಿದ್ದರು.

ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
*****

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *