Breaking News

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಪರ್ ಭರವಸೆ…!!

ಬೆಂಗಳೂರು :ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆಯ ಪ್ರಮುಖ ಅಂಶವನ್ನು ವಿವರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಈಡೇರಿಸಲಾಗುವುದು. ಮೊದಲ ಸಚಿವ ಸಂಪುಟ ಸಭೆಯಲ್ಲಿ ಅದನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಇತರ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ. ಪರಮೇಶ್ವರ್, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ, ವಕ್ತಾರ ಗೌರವ್ ವಲ್ಲಭ್, ಪ್ರೊ. ರಾಜೀವ್ ಗೌಡ, ಪ್ರೊ ಕೆ ಈ ರಾಧಾಕೃಷ್ಣ, ಮತ್ತಿತರರು ಉಪಸ್ಥಿತರಿದ್ದರು.

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ-ಕುಂಕುಮ ಹಚ್ಚಿ, ವೀಳ್ಯದೆಲೆ ಅಡಿಕೆ ಇಟ್ಟು ಸಾಂಪ್ರದಾಯಿಕವಾಗಿ ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.

ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಬೆಂಗಳೂರು ನಗರಗಳಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲಾಗಿದೆ. ಜನವರಿಯಲ್ಲೇ ಕರಾವಳಿ ಕರ್ನಾಟಕಕ್ಕೆ 10 ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದೇ ರೀತಿಯಲ್ಲಿ ಬೇರೆ ವಿಭಾಗಗಳಿಗೂ ಪ್ರದೇಶವಾರು ಕಾರ್ಯಕ್ರಮ ಪ್ರಕಟಿಸಲಾಗಿದೆ.

ಐದು ಗ್ಯಾರಂಟಿ ಯೋಜನೆ ಈಗಾಗಲೇ ಪ್ರಕಟ: ಈಗಾಗಲೇ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’, ಪ್ರತಿ ಮನೆಯೊಡತಿಗೆ 2 ಸಾವಿರ ರು. ಮಾಸಿಕ ಸಹಾಯ ಧನ ನೀಡುವ ‘ಗೃಹ ಲಕ್ಷ್ಮೇ’, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರು. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’, ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುವ ‘ಅನ್ನಭಾಗ್ಯ’, ಮಹಿಳೆಯರಿಗೆ ಉಚಿತ ಪ್ರಯಾಣದ ‘ಸಖಿ’ ಭರವಸೆ ಸೇರಿದಂತೆ ಐದು ಗ್ಯಾರಂಟಿ ಯೋಜನೆ ಪ್ರಕಟಿಸಲಾಗಿದೆ.

ಅಂಗನವಾಡಿ, ಆಶಾ ಸಿಬ್ಬಂದಿ ಗೌರವ ಧನ ಹೆಚ್ಚಳ: ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ 11,500 ರು.ಗಳಿಂದ 15 ಸಾವಿರ ರು., ಅಂಗನವಾಡಿ ಸಹಾಯಕಿಯರ ಸಹಾಯಧನ 7,500 ರು.ಗಳಿಂದ 10 ಸಾವಿರ ರು., ಆಶಾ ಕಾರ್ಯಕರ್ತೆಯರ ಗೌರವ ಧನ 5 ಸಾವಿರ ರು.ಗಳಿಂದ 8 ಸಾವಿರ ರು., ಬಿಸಿಯೂಟ ಅಡುಗೆ ಸಹಾಯಕರ ಗೌರವ ಧನ 3,700 ರು.ಗಳಿಂದ 5 ಸಾವಿರ ರು.ಗಳಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

ಇವುಗಳ ಜತೆಯಲ್ಲಿ ಪೌರಕಾರ್ಮಿಕರ ಹುದ್ದೆ ಕಾಯಂ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಕಾಂಗ್ರೆಸ್‌ ಪ್ರಣಾಳಿಕೆ ಒಳಗೊಂಡಿರಲಿದೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕನಕಪುರದಲ್ಲಿ ವಿಶ್ವ ದರ್ಜೆಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂಬ ವಿಷಯವನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ.ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುವ ಕ್ಷೇತ್ರ ಎನ್ನುವುದು ವಿಶೇಷ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *