Breaking News

45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ

ಬೆಳಗಾವಿ, ಏ.18(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಗರದ ವಂಟಮುರಿ ಕಾಲನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ (ಏ.18) ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡರು.

ಇದಕ್ಕೂ ಎಂಟು ವಾರಗಳ ಮುಂಚೆ  ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಅನ್ನು‌‌ ಅವರು ಪಡೆದುಕೊಂಡಿದ್ದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು, ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ; ಆದ್ದರಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ ಪ್ರತಿದಿ‌ನ 30 ಸಾವಿರ ಲಸಿಕೆ:

ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇಲ್ಲದಿರುವುದರಿಂದ ಜಿಲ್ಲೆಯಲ್ಲಿ ಜನರು ಉತ್ಸಾಹದಿಂದ ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದು, ಪ್ರತಿದಿನ 30 ಸಾವಿರ ಲಸಿಕೆಯನ್ನು ನೀಡಲು ಕ್ರಮಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.

ದೊಡ್ಡ ಜಿಲ್ಲೆಯಾಗಿರುವುದರಿಂದ ಎಲ್ಲ ಕಡೆಯೂ ಏಕರೂಪವಾಗಿ ಲಸಿಕೆ ಪೂರೈಸುವುದರಲ್ಲಿ ಸ್ವಲ್ಪಮಟ್ಟಿಗೆ ವ್ಯತ್ಯಯ ಉಂಟಾಗಿರಬಹುದು. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಅಪನಂಬಿಕೆ ಬೇಡ; ಮಾರ್ಗಸೂಚಿ ಪಾಲಿಸಿ:

ಕೋವಿಡ್-೧೯ ಲಸಿಕೆ ಪಡೆದುಕೊಂಡ ಬಳಿಕವೂ ಸೋಂಕು‌ ಬರುತ್ತದೆ ಎಂಬ ಅಪನಂಬಿಕೆ ಬೇಡ. ಲಸಿಕೆ ಪಡೆಸ ಬಳಿಕವೂ ಮಾಸ್ಕ್ ಧರಿಸುವುದು; ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಪಾಡಿಕೊಳ್ಳುವುದು ಕೂಡ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಲಸಿಕೆ ಪಡೆದುಕೊಂಡ ಬಳಿಕವೂ ಒಂದು‌ ವೇಳೆ ಸೋಂಕು ತಗುಲಿದರೂ ಅಪಾಯದ ಪ್ರಮಾಣ ಕಡಿಮೆ ಇರುತ್ತದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ಪಡೆದುಕೊಳ್ಳಬೇಕು.

ಅಪನಂಬಿಕೆ ಅಥವಾ ಸುಳ್ಳುಸುದ್ದಿಗಳಿಗೆ ಕಿವಿಗೊಡದೇ 45 ವರ್ಷ ಮೇಲ್ಪಟ್ಟವರು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲೆಯ ಜನತೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿ ರವೀಂದ್ರ ಕರಲಿಂಗಣ್ಣವರ ಅವರು ಲಸಿಕೆಯನ್ನು ಪಡೆದುಕೊಂಡರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.

ಕೋವಿಡ್ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಬೆಳಗಾವಿ,  ಹೊರಗಡೆಯಿಂದ ಬಂದು ವಾರಕ್ಕಿಂತ ಹೆಚ್ಚು ಕಾಲ ಇಲ್ಲಿಯೇ ವಾಸಿಸುವ ನಾಗರಿಕರು ಅಥವಾ ಕುಟುಂಬಗಳು ಸ್ವಯಂಪ್ರೇರಣೆಯಿಂದ ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-೧೯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಸೋಂಕು ಕೆಲವೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ತಮ್ಮ ಕುಟುಂಬ ಹಾಗೂ ಸಮಾಜದ ಆರೋಗ್ಯದ ದೃಷ್ಟಿಯಿಂದ ನಾಗರಿಕರು ಸ್ವಯಂಪ್ರೇರಣೆಯಿಂದ ತಪಾಸಣೆ ಮಾಡಿಕೊಳ್ಳಬೇಕು.

ಒಂದು ವೇಳೆ ಸೋಂಕು ಕಂಡುಬಂದರೆ ಸಕಾಲಕ್ಕೆ‌ ಸೂಕ್ತ ಚಿಕಿತ್ಸೆ ಪಡೆಯಲು ಮತ್ತು ಕುಟುಂಬ ಹಾಗೂ ಇತರರಿಗೆ ಸೋಂಕು ಹರಡದಂತೆ ತಡೆಯಲು ಸಹಕಾರಿಯಾಗಲಿದೆ.

ಆದ್ದರಿಂದ ಪ್ರಸ್ತುತ ಸನ್ನಿವೇಶದಲ್ಲಿ ಇಲ್ಲಿಗೆ ಆಗಮಿಸಿ ಒಂದು ವಾರಕ್ಕಿಂತ ಹೆಚ್ಚು ಕಾಲ‌ ಉಳಿದುಕೊಳ್ಳುವವರು ಕೋವಿಡ್-೧೯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ಸ್ವಯಂಪ್ರೇರಣೆಯಿಂದ ತಪಾಸಣೆಗೆ ಮುಂದಾಗುವ ಜನರಿಗೆ ಕೋವಿಡ್-೧೯ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.

ಹೀಗೆ ತಪಾಸಣೆಗೆ ಆಗಮಿಸುವವರಿಗೆ ಸರಕಾರದ ಮಾರ್ಗಸೂಚಿ ಪ್ರಕಾರ ತಪಾಸಣೆ ನಡೆಸಿ ತಕ್ಷಣವೇ ವರದಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *