Breaking News
Home / Breaking News / ಬೆಳಗಾವಿಯ ಖಾಸಗಿ ಆಸ್ಪತ್ರೆಗಳಿಗೆ ಡಿಸಿ ವಾರ್ನಿಂಗ್…!!

ಬೆಳಗಾವಿಯ ಖಾಸಗಿ ಆಸ್ಪತ್ರೆಗಳಿಗೆ ಡಿಸಿ ವಾರ್ನಿಂಗ್…!!

ಕೋವಿಡ್ ನಿರ್ವಹಣೆ: ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ
ಸರಕಾರದ‌ ಮಾರ್ಗಸೂಚಿ ಪ್ರಕಾರ ಬೆಡ್ ಹಾಗೂ ಚಿಕಿತ್ಸೆ ಒದಗಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ

ಬೆಳಗಾವಿ,- ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ನೋಂದಾಯಿತ ಎಲ್ಲ ಖಾಸಗಿ ಆಸ್ಪತ್ರೆಗಳು ಸರಕಾರದ ಮಾರ್ಗಸೂಚಿ ಪ್ರಕಾರ ಶೇ.50 ರಷ್ಟು ಬೆಡ್ ಗಳನ್ನು ಒದಗಿಸುವುದರ ಜತೆಗೆ ನಿಗದಿಪಡಿಸಿದ ದರದಲ್ಲಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದರು.

ಸಂಭವನೀಯ ಕೋವಿಡ್ ಮೂರನೇ ಅಲೆಯ ನಿರ್ವಹಣೆಯ ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜ.8) ನಡೆದ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ, ಕೆಪಿಎಂಇ ಹಾಗೂ ಆರೋಗ್ಯ ಸುರಕ್ಷಾ ಟ್ರಸ್ಟ್ ‌ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರದಿಂದ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ.
ಇದಕ್ಕೆ ಅನುಕೂಲವಾಗುವಂತೆ ಎಲ್ಲ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು. ಇದಲ್ಲದೇ ಕಾಲ ಕಾಲಕ್ಕೆ ತಕ್ಕಂತೆ ಸರಕಾರ ನಿಗದಿಪಡಿಸಿದ ದರದಲ್ಲಿ ಕೋವಿಡ್ ಚಿಕಿತ್ಸೆಯನ್ನು ನೀಡಬೇಕು.

ಪ್ರತಿ‌ ಆಸ್ಪತ್ರೆಯು ತಮ್ಮಲ್ಲಿರುವ ಹಾಸಿಗೆಗಳ ಸಂಖ್ಯೆ, ಆಕ್ಸಿಜನ್ ಸೌಲಭ್ಯ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು. ಪರಿಸ್ಥಿತಿಯನ್ನು ಆಧರಿಸಿ ಕಳುಹಿಸಲಾಗುವ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಆಕ್ಸಿಜನ್ ‌ಕೊರತೆ ಇಲ್ಲ:

ಕೋವಿಡ್ ಸೋಂಕಿತರ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ಬಗೆಯ ಅಗತ್ಯ ಸಾಮಗ್ರಿಗಳು ಲಭ್ಯವಿವೆ. ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಕೂಡ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಆದ್ದರಿಂದ ಆಕ್ಸಿಜನ್ ಕೊರತೆ ಎದುರಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸ್ಪಷ್ಟಪಡಿಸಿದರು.

ಖಾಸಗಿ ಆಸ್ಪತ್ರೆಗಳ ಅಗತ್ಯತೆ ಆಧರಿಸಿ ಆಕ್ಸಿಜನ್ ಪೂರೈಸಲು ಕೂಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿರುತ್ತದೆ.
ಆಕ್ಸಿಜನ್ ಪೂರೈಕೆ, ಬೆಡ್ ಗಳ ನಿರ್ವಹಣೆ, ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಯಾವುದೇ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದ ಚಿಕಿತ್ಸಾ ದರಕ್ಕಿಂತ ಹೆಚ್ಚಿನ ದರ ವಿಧಿಸುವುದು ಕಂಡುಬಂದರೆ‌ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ ನೀಡಿದರು.

ಮಕ್ಕಳ ಚಿಕಿತ್ಸೆಗೆ ‌ವಿಶೇಷ ವ್ಯವಸ್ಥೆ:

ಸಂಭವನೀಯ ಮೂರನೇ ವೇಳೆ ಸೋಂಕಿನಿಂದ ಬಾಧಿತರಾಗುವ ಮಕ್ಕಳ ಚಿಕಿತ್ಸೆಗೆ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ಮಕ್ಕಳಿಗಾಗಿ ಪ್ರತ್ಯೇಕ ಚಿಕಿತ್ಸೆಗೆ ಅನುಕೂಲವಾಗುವಂತೆ ಬೆಡ್ ಗಳನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಮಕ್ಕಳ ವೈದ್ಯಕೀಯ ತಜ್ಞರು ಈ ಬಗ್ಗೆ ಮುತುವರ್ಜಿಯಿಂದ ಕೆಲಸ ಮಾಡಬೇಕು. ತುರ್ತು ಸಂದರ್ಭದಲ್ಲಿ ‌ಬರುವ ಯಾವುದೇ ‌ಮಕ್ಕಳಿಗೆ ಚಿಕಿತ್ಸೆಯನ್ನು ನಿರಾಕರಿಸಬಾರದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಅವರು, ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಮಾಡಿಕೊಳ್ಳಲಾಗಿರುವ ಸಿದ್ಧತೆಗಳ ಕುರಿತು ಸಭೆಯಲ್ಲಿ ಮಾಹಿತಿಯನ್ನು ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ‌ಮುಖ್ಯಸ್ಥರು ಮತ್ತು ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
****

Check Also

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ …

Leave a Reply

Your email address will not be published. Required fields are marked *