Breaking News
Home / Breaking News / ಬೆಳಗಾವಿಗೆ ಗಡ್ಕರಿಯಿಂದ ಬಂಪರ್ ಲಾಟರಿ…..!!!

ಬೆಳಗಾವಿಗೆ ಗಡ್ಕರಿಯಿಂದ ಬಂಪರ್ ಲಾಟರಿ…..!!!

ಬೆಳಗಾವಿ, – ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ‌ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಢಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ (ಫೆ‌28) ನಡೆದ ಒಟ್ಟು 3972 ಕೋಟಿ ರೂಪಾಯಿ ವೆಚ್ಚದ 238 ಕಿ.ಮೀ. ಉದ್ದದ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಎಲ್ಲ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಸೇರಿದಂತೆ ರಾಜ್ಯದ ಇತರ ಕಡೆಯ ರಿಂಗ್ ರಸ್ತೆಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಿಎಂ ಬೊಮ್ಮಾಯಿ ಮನವಿ ಮಾಡಿಕೊಂಡರು.

ಮಹಾರಾಷ್ಟ್ರದ ಕಾರ್ಮಿಕ ಸ್ಥಳಗಳಾದ ಪಂಢರಾಪುರ, ಶಿರಡಿ ಮತ್ತಿತರ ಧಾರ್ಮಿಕ ಸ್ಥಳಗಳನ್ನು ಕರ್ನಾಟಕ ರಾಜ್ಯದ ಧಾರ್ಮಿಕ ಸ್ಥಳಗಳ ಜತೆ ಜೋಡಿಸಲು ವಿನೂತನ ಯೋಜನೆಯನ್ನು ನಿತಿನ್ ಗಡ್ಕರಿ ಅವರು ರೂಪಿಸಿದ್ದಾರೆ.
ಎಲ್ಲ ಸಂಸದರು ತಮ್ಮ ವ್ಯಾಪ್ತಿಯ ಹೆದ್ದಾರಿಗಳು ಮತ್ತಿತರ ರಸ್ತೆ ಅಭಿವೃದ್ಧಿಗೆ ದುಂಬಾಲು ಬೀಳುವ ಮೂಲಕ ಇಡೀ ರಾಜ್ಯಕ್ಕೆ ಅತ್ಯುತ್ತಮ ಯೋಜನೆಗಳನ್ನು ತಂದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನೆರವಿನಿಂದ ರಾಜ್ಯಕ್ಕೆ ಹಲವಾರು ಯೋಜನೆಗಳು ಲಭಿಸಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಜಿಎಸ್ ಟಿ ವಿನಾಯಿತಿ; ಸಿಎಂ ಭರವಸೆ:

ರಾಜ್ಯದಲ್ಲಿರುವ ಹೆದ್ದಾರಿಗಳು ಮತ್ತು ರಿಂಗ್ ರಸ್ತೆಯ ಅಭಿವೃದ್ಧಿಗಾಗಿ ರಾಜ್ಯ ಸರಕಾರದ‌ ವತಿಯಿಂದ ಜಿ.ಎಸ್.ಟಿ. ವಿನಾಯಿತಿ, ಭೂಸ್ವಾಧೀನ ಮತ್ತಿತರ ಸಹಕಾರವನ್ನು ರಾಜ್ಯ ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯನ್ನು ನೀಡಿದರು.
ರಸ್ತೆಗಳು ಅಭಿವೃದ್ಧಿ ಮಾತ್ರವಲ್ಲ ದೇಶದ ಭಾವೈಕ್ಯತೆಗೆ ಬೆಸುಗೆಯಾಗುವೆ ಎಂದು ಅವರು ಅಭಿಪ್ರಾಯಪಟ್ಟರು.

ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮೂಲಕ ಬೆಳಗಾವಿಯಲ್ಲಿ ರಸ್ತೆ ಸಂಪರ್ಕ ಕ್ರಾಂತಿ ಆಗಲಿದೆ.
ಸಚಿವ ನಿತಿನ ಗಡ್ಕರಿ ಅವರು ಮಹಾರಾಷ್ಟ್ರದ ಲ್ಲಿ ಲೋಕೋಪಯೋಗಿ ಸಚಿವರಾಗಿದ್ದಾಗ ಒಂದೇ ಯೋಜನೆಯಡಿ 58 ಕ್ಕೂ ಅಧಿಕ ಮೇಲ್ಸೆತುವೆ ನಿರ್ಮಿಸಿ ಇಡೀ ದೇಶದ ಗಮನ ಸೆಳೆದಿದ್ದರು.
ಬೃಹತ್ ರಸ್ತೆ ಯೋಜನೆಗಳಿಗೆ ಸಮರ್ಪಕವಾಗಿ ಹಣ ಹೊಂದಿಸುವ ಮೂಲಕ ಮೂಲಸೌಕರ್ಯಗಳನ್ನು ಹೇಗೆ ಅಭಿವೃದ್ಧಿ ಪಡಿಸಬೇಕು ಎಂಬುದನ್ನು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ.
ರಾಜ್ಯದಲ್ಲಿ ಒಂದು ರಸ್ತೆ ಮೇಲ್ದರ್ಜೆಗೆ ಏರಿಸಲು ವರ್ಷಗಟ್ಟಲೆ ‌ಬೇಕಾಗಿತ್ತು.ಆದರೆ ಸಚಿವ ನಿತಿನ್ ಗಡ್ಕರಿ‌ ಕಾಲದಲ್ಲಿ ಐದು ಸಾವಿರಕ್ಕೂ ಅಧಿಕ ಕಿ.ಮೀ. ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ- ಸಚಿವ ನಿತಿನ್ ಗಡ್ಕರಿ ಭರವಸೆ

ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು, ಭಾರತದ‌ ರಸ್ತೆ ಜಾಲವನ್ನು 2024 ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಹೇಳಿದರು.

ಭಾರತ ಮಾಲಾ-2 ರಲ್ಲಿ ಸೇರ್ಪಡೆ:

ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.
ಹೊಸ ಮೇಲ್ಸೆತುವೆ ಪ್ರಸ್ತಾವವನ್ನು ಅಭಯ್ ಪಾಟೀಲ ನೀಡಿದ್ದರು. ಆದರೆ ಸ್ಥಳೀಯ ಕಾರಣಗಳಿಂದ ಅದು‌ ಸಾಧ್ಯವಾಗಿರುವುದಿಲ್ಲ. ಸ್ಥಳೀಯವಾಗಿ ಅಗತ್ಯ ಸಹಕಾರ ನೀಡಿದರೆ ಮುಂದುವರಿಸಲಾಗುವುದು ಎಂದರು.
ಈ ಭಾಗದ ಸಂಸದರು, ಶಾಸಕರು ವಿವಿಧ ರಸ್ತೆಗಳ ಅಭಿವೃದ್ಧಿ ಮಾಡಲು ಹಾಗೂ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದ್ದು, ಈ ಎಲ್ಲ ಪ್ರಸ್ತಾವನೆಗಳಿಗೆ‌ ತಕ್ಷಣವೇ ಮಂಜೂರಾತಿ ನೀಡಲಾಗುವುದು.
9 ಸಾವಿರ ಕಿ.ಮೀ. ಉದ್ದದ ಗ್ರೀನಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3 ಲಕ್ಷ ಕೋಟಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಒಳಗೊಂಡಿದೆ.
ದೆಹಲಿ-ಮುಂಬೈ ಹೆದ್ದಾರಿ ಯಲ್ಲಿ 120 ಕಿ.ಮೀ.‌ವೇಗದಲ್ಲಿ ವಾಹನ ಚಲಾಯಿಸಬಹುದು ಇದರಿಂದ ಎರಡು‌ ನಗರಗಳ ನಡುವಿನ ಪ್ರಯಾಣ ಅವಧಿ 12 ಗಂಟೆಯಾಗಲಿದೆ.

ಬೆಂಗಳೂರು ಟ್ರಾಫಿಕ್ ಹಾಗೂ ನಗರೀಕರಣ ಒತ್ತಡವನ್ನು ನಿಯಂತ್ರಿಸುವ ದೃಷ್ಟಿಯಿಂದ ಹೆದ್ದಾರಿಗಳ ಪಕ್ಕದಲ್ಲಿ ಭೂಸ್ವಾಧೀನ‌ ಮಾಡಿಕೊಂಡು ಸ್ಮಾರ್ಟ್ ‌ವಿಲೇಜ್ ಹಾಗೂ ಕೈಗಾರಿಕೆ ಸ್ಥಾಪಿಸುವ ಮೂಲಕ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಯೋಜನೆ ರೂಪಿಸಿದರೆ ಕೇಂದ್ರ ಸರಕಾರದ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರಕಾರವು ಅಗತ್ಯ ರಸ್ತೆ ಯೋಜನೆಗಳಿಗೆ ಭೂಸ್ವಾಧೀನವನ್ನು ಮಾಡಿಕೊಟ್ಟರೆ ರಾಜ್ಯದಲ್ಲಿ ಪ್ರವಾಸೋದ್ಯಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಪುಣೆ-ಬೆಂಗಳೂರು ಹೆದ್ದಾರಿ ಅಂತರ ಕಡಿಮೆಗೊಳಿಸುವ ಯೋಜನೆ:

ಭಾರತ‌ ಮಾಲಾ-2 ಯೋಜನೆಯಲ್ಲಿರುವ ಪುಣೆ-ಬೆಂಗಳೂರು ರಸ್ತೆಯ ಈಗಿನ ಅಂತರವನ್ನು 100 ಕಿ.ಮೀ. ಕಡಿಮೆಗೊಳಿಸುವ ಯೋಜನೆ ರೂಪಿಸಲಾಗಿದೆ. ಮುಂದೆ ಇದು ಬೆಂಗಳೂರು-ಚೆನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಿದೆ ಎಂದು ವಿವರಿಸಿದರು.

ರಾಣಿ ಬೆಳವಡಿ ಮಲ್ಲಮ್ಮ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ನಡುವಿನ ಸಂಬಂಧವ ಮರಾಠಾ-ಕನ್ನಡಿಗರ ಸಹೋದರತ್ವಕ್ಕೆ ಸಾಕ್ಷಿಯಾಗಿದೆ ಎಂದು ಗಡ್ಕರಿ ಬಣ್ಣಿಸಿದರು.

ಈ ಐದು ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆಯು ಈ ಭಾಗದ ರಸ್ತೆ ಸಂಪರ್ಕಕ್ಕೆ ಅನುಕೂಲವಾಗಲಿದೆ.
ಈ ರಸ್ತೆಗಳು ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ರಸ್ತೆ ಸಂಪರ್ಕವನ್ನು ಉತ್ತಮ ಪಡಿಸಲಿವೆ. ಇದರಿಂದ ಕಬ್ಬು ಸಾಗಾಣಿಕೆ ಸೇರಿದಂತೆ ಇತರೆ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದರು.

1.40 ಲಕ್ಷ ಕಿ.ಮೀ. ರಸ್ತೆ ನಿರ್ಮಾಣ:

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ ಅವರು, 2014 ರವರೆಗೆ ದೇಶದಲ್ಲಿ ಒಟ್ಟಾರೆ 91 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಇತ್ತು. ನರೇಂದ್ರ ಮೋದಿಜಿ ಪ್ರಧಾನಮಂತ್ರಿಯಾದ ನಂತರದ ಕೇವಲ ಏಳು ವರ್ಷಗಳಲ್ಲಿ 1.40 ಲಕ್ಷ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿರುವುದು ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಸಚಿವ ಜೋಶಿ ಹೇಳಿದರು.

ಅತ್ಯಂತ ಕಡಿಮೆ‌ ಕಾಲಘಟ್ಟದಲ್ಲಿ ‌ಮಹತ್ವಪೂರ್ಣ ಬದಲಾವಣೆ ಹಾಗೂ ರಸ್ತೆಗಳ ಅಭಿವೃದ್ಧಿ ಆಗಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ‌ ಹಾಗೂ ಸಚಿವ ನಿತಿನ್ ಗಡ್ಕರಿ ಅವರ ಅವಧಿಯಲ್ಲಿ ಆಗಿದೆ.
ಸಚಿವ ಗಡ್ಕರಿಯವರು ಇಡೀ ದೇಶದಲ್ಲಿ ಕರ್ನಾಟಕ ರಾಜ್ಯಕ್ಕೆ ಅತೀ ಹೆಚ್ಚು ಯೋಜನೆಗಳನ್ನು ನೀಡಿದ್ದಾರೆ. ರಸ್ತೆಗಳಿಂದಲೇ‌ ದೇಶದ ಸಾಧ್ಯ ಎಂಬುದನ್ನು ಅರಿತುಕೊಂಡಿರುವ ಅವರು, ಉತ್ತಮ ರಸ್ತೆಗಳ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಿದ್ದಾರೆ.
ಎಲ್ಲಾ ರಸ್ತೆ ಅಂಡಪಾಸ್ ಗಳನ್ನು ಕೇಂದ್ರ ರಸ್ತೆ ಸಾರಿಗೆ‌ ಹಾಗೂ ಹೆದ್ದಾರಿ ಇಲಾಖೆಯ ವತಿಯಿಂದ ಮಾಡಿಕೊಡಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿ ಯ ಅಂಡರ ಪಾಸ್ ನಿರ್ಮಾಣ ಸುಲಭವಾಗಲಿದೆ ಎಂದರು.
ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ 42 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಕರ್ನಾಟಕಕ್ಕೆ ನೀಡಲಾಗಿದೆ. ಪಕ್ಷಾತೀತವಾಗಿ ಎಲ್ಲ ಸಂಸದರ ಪ್ರಸ್ತಾವಗಳಿಗೆ ಸಚಿವ ಗಡ್ಕರಿ ಅವರು ಮಂಜೂರಾತಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ರಾಜ್ಯಕ್ಕೆ ಇನ್ನಷ್ಟು ನೆರವು ಒದಗಿಸಲು ಮನವಿ:

ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ.ಪಾಟೀಲ ಮಾತನಾಡಿ, ಹಿಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಾದ್ಯಂತ ಹೆದ್ದಾರಿಗಳನ್ನು ನಿರ್ಮಿಸುವ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಗೆ ಚಾಲನೆ ನೀಡಿದ್ದರು. ಇಂದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಲೋಕೋಪಯೋಗಿ ಇಲಾಖೆಯ ಸಚಿವರು ಅವರ ಕನಸನ್ನು ನನಸು ಮಾಡಿದ್ದಾರೆ ಎಂದು ಹೇಳಿದರು.
ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದ್ದು, ಪ್ರತಿದಿನ 70 ಕಿ.ಮೀ. ಹೆದ್ದಾರಿ ನಿರ್ಮಾಣದ ಗುರಿಯನ್ನು ಸರಕಾರ ಹೊಂದಿದೆ.
ಕರ್ನಾಟಕದ ರಾಜ್ಯದ ಹೆದ್ದಾರಿಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರವು ಇನ್ನೂ ಹೆಚ್ಚಿನ ನೆರವು ನೀಡಬೇಕು ಎಂದು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿಕೊಂಡರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಇಲಾಖೆಯ ಸಚಿವ ಗೋವಿಂದ ಕಾರಜೋಳ, ಮಾತನಾಡಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಕರ್ನಾಟಕ ರಾಜ್ಯದ ರಸ್ತೆ ಗಳ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡುವ ಮೂಲಕ ಪ್ರಗತಿಗೆ ಸಹಕರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ್ ಕತ್ತಿ, ಬೆಳಗಾವಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಯನ್ನು ಷಟ್ಪಥವನ್ನಾಗಿ ನಿರ್ಮಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಧಾರ್ಮಿಕ ದತ್ತಿ ಹಾಗೂ ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ, ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ಸಂಸದರಾದ ಮಂಗಲ ಅಂಗಡಿ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ವಿಜಯಪುರ ಸಂಸದ ರಮೆಶ್ ಜಿಗಜಿಣಗಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡ್ಡಗೌಡ್ರ, ಬಾಗಲಕೋಟ ಶಾಸಕ ವೀರಣ್ಣ ಚರಂತಿಮಠ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮತ್ತಿತರರು ಉಪಸ್ಥಿತರಿದ್ದರು.

ಐದು ಯೋಜನೆಗಳಿಗೆ ಶಂಕುಸ್ಥಾಪನೆ:

ಬೆಳಗಾವಿ-ಸಂಕೇಶ್ವರ ಬೈಪಾಸ್, ಸಂಕೇಶ್ವರ ಬೈಪಾಸ್-ಮಹಾರಾಷ್ಟ್ರ ಗಡಿಯವರೆಗೆ ಷಟ್ಪಥ ನಿರ್ಮಾಣ ಕಾಮಗಾರಿ; ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ಕಾಮಗಾರಿಗಳು; ಇದೇ ರೀತಿ ವಿಜಯಪುರ-ಮುರಗುಂಡಿ(ಎನ್.ಎಚ್.548ಬಿ) ಹಾಗೂ ಸಿದ್ದಾಪುರ-ವಿಜಯಪುರ(ಎನ್.ಎಚ್.561ಎ) ಕಾಮಗಾರಿಗಳಿಗೆ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಿದರು.
****

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *