ಬೆಳಗಾವಿ: ಬಿಜೆಪಿ ನಾಯಕರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಆಕಾಂಕ್ಷಿಗಳನ್ನು ಸಂಪುಟಕ್ಕೆ ಸೇರ್ಪಡೆ ಕುರಿತು ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಚಳಿಗಾಲದ ಅಧಿವೇಶನ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.
ದೆಹಲಿಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ಸರಕಾರವು ಎಸ್‌ಸಿಗಳಿಗೆ ಶೇ.15ರಿಂದ ಶೇ.17ಕ್ಕೆ ಮತ್ತು ಎಸ್‌ಟಿಗಳಿಗೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡುವುದು ಸೇರಿದಂತೆ ನಾನಾ ವಿಷಯಗಳ ಕುರಿತು ಕೇಂದ್ರದ ನಾಯಕರೊಂದಿಗೆ ಸಿಎಂ ಬೊಮ್ಮಾಯಿ ಅವರು ಚರ್ಚೆ ನಡೆಸಲಿದ್ದಾರೆ.
ಏತನ್ಮಧ್ಯೆ, ಪಂಚಮಸಾಲಿಗಳು ಮೀಸಲಾತಿಗಾಗಿ ಹೋರಾಟ ತೀವ್ರಗೊಳಿಸಿದ್ದು, ಈ ವಿಚಾರವನ್ನು ಮುಖ್ಯಮಂತ್ರಿಗಳು ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ.