ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ: ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಘೋಷಣೆ
ಬೆಳಗಾವಿ, ಮಾ.4(ಕರ್ನಾಟಕ ವಾರ್ತೆ): ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು.
ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿಶೇಷ ಅನುದಾನ ನೀಡಬೇಕು ಎಂಬುದು ಇಲ್ಲಿನ ಜನರ ಹಾಗೂ ಕನ್ನಡಪರ ಸಂಘಟನೆಗಳ ಬಹುದಿನಗಳ ಬೇಡಿಕೆಯಾಗಿದೆ. ಇತ್ತೀಚಿನ ಕನ್ನಡ ರಾಜ್ಯೋತ್ಸವದಲ್ಲಿ ಮೂರು ಲಕ್ಷ ಜನರು ಸ್ವಯಂಪ್ರೇರಣೆಯಿಂದ ಸೇರಿದ್ದರು. ಆದ್ದರಿಂದ ಪ್ರಾಧಿಕಾರದ ವತಿಯಿಂದ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆಯಲ್ಲಿ ವಿನಂತಿಸಿದರು.
ಇದಕ್ಕೆ ತಕ್ಷಣವೇ ಸ್ಪಂದಿಸಿದ ಪ್ರಾಧಿಕಾರದ ಅಧ್ಯಕ್ಷರು, ಪ್ರಾಧಿಕಾರದಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ನೀಡುವುದಾಗಿ ಸಭೆಯಲ್ಲಿಯೇ ಘೋಷಿಸಿದರು.
ಗಡಿಪ್ರದೇಶ ಮೂಲಸೌಕರ್ಯಕ್ಕೆ 18 ಕೋಟಿ ಅನುದಾನ:
ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 2011-12 ರಿಂದ ಇಲ್ಲಿಯವರೆಗೆ ಸುಮಾರು 18 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿರುತ್ತದೆ.
ಶಾಲೆಗಳ ಅಭಿವೃದ್ಧಿ, ಸಾಂಸ್ಕೃತಿಕ ಭವನಗಳ ನಿರ್ಮಾಣ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು ಈ ಅನುದಾನ ಬಿಡುಗಡೆ ಮಾಡಲಾಗಿತ್ತು.
ಈ ಪೈಕಿ ಇದುವರೆಗೆ 927.72 ಲಕ್ಷ ಹಣ ಬಳಕೆ ಪ್ರಮಾಣಪತ್ರ ಸಲ್ಲಿಸಲಾಗಿದ್ದು, ಇನ್ನುಳಿದ 868.28 ಲಕ್ಷ ರೂಪಾಯಿ ಅನುದಾನಕ್ಕೆ ಸಂಬಂಧಿಸಿದಂತೆ ಹಣ ಬಳಕೆ ಪ್ರಮಾಣಪತ್ರ ಹದಿನೈದು ದಿನಗಳ ಒಳಗಾಗಿ ಸಲ್ಲಿಸಬೇಕು ಎಂದು ಡಾ.ಸಿ.ಸೋಮಶೇಖರ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕಾಮಗಾರಿಗಳು ಪೂರ್ಣಗೊಂಡಿರುವುದು ಮತ್ತು ಬಳಕೆಯನ್ನು ಪರಿಶೀಲಿಸಬೇಕು ಎಂದು ಹೇಳಿದರು.
ಗಡಿಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಅನುಷ್ಠಾನ ಮತ್ತು ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಾ.ಸಿ.ಸೋಮಶೇಖರ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ಅತ್ಯುತ್ತಮವಾಗಿ ನಿರ್ವಹಿಸಿದೆ. ಅದೇ ರೀತಿ ವಿವಿಧ ಸಂಘ-ಸಂಸ್ಥೆಗಳು ಕೂಡ ಗಡಿಭಾಗದ ಸಾಂಸ್ಕೃತಿಕ ಅಭಿವೃದ್ಧಿಗೆ ಪರಸ್ಪರ ಸಾಮರಸ್ಯದಿಂದ ಕೆಲಸ ಮಾಡುತ್ತಿವೆ.
ಕನ್ನಡದ ಅಸ್ಮಿತೆಗೆ ಧಕ್ಕೆ ಬಾರದಂತೆ ಉಳಿದ ಭಾಷೆಗಳು ಬೆಳೆಯಬೇಕು. ಗಡಿಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಸೌಕರ್ಯ ಕೊರತೆ ಹಾಗೂ ಶಿಕ್ಷಕರ ಕೊರತೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನಿಗಾ ವಹಿಸಬೇಕು. ಇಂತಹ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕೊರತೆ ಆಗಬಾರದು. ಕೆಲವು ಕಡೆಗಳಲ್ಲಿ ಪ್ರೌಢಶಾಲೆ ಇಲ್ಲದಿರುವುದರಿಂದ ಅನೇಕ ಬಾಲಕಿಯರು ಶಿಕ್ಷಣವನ್ನು ಅರ್ಧಕ್ಕೆ ಮೊಟುಕುಗೊಳಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಸಮೀಪದಲ್ಲೇ ಪ್ರೌಢಶಾಲೆ ಆರಂಭಿಸಲು ಪ್ರಸ್ತಾವ ಸಲ್ಲಿಸಬೇಕು.
ಪ್ರತಿಯೊಂದು ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದೆ. ಆದ್ದರಿಂದ ಡಿಡಿಪಿಐಗಳು ಈ ಬಗ್ಗೆ ಗಮನಹರಿಸಬೇಕು.
ಗಡಿಭಾಗದ ಗ್ರಾಮಗಳು ಮತ್ತು ಶಾಲೆಗಳಿಗೆ ಅಧಿಕಾರಿಗಳು ಪ್ರತಿ ತಿಂಗಳು ತಪ್ಪದೇ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳನ್ನು ಪಟ್ಟಿ ಮಾಡಿ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಡಾ.ಸಿ.ಸೋಮಶೇಖರ್ ಸೂಚನೆ ನೀಡಿದರು.
ಗುಡ್ಡಗಾಡು ಪ್ರದೇಶಗಳ ಶಾಲೆಗಳಿಗೆ ತೆರಳಿ ಕನ್ನಡ ಬೋಧಿಸಲು ಮುಂದಾಗುವ ಅತಿಥಿ ಶಿಕ್ಷಕರಿಗೆ ಪ್ರಾಧಿಕಾರದ ವತಿಯಿಂದ ಕೂಡ ಹೆಚ್ಚುವರಿ ಸಂಭಾವನೆ ನೀಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವ ಸಲ್ಲಿಸಲು ತಿಳಿಸಿದರು.
ಇದಲ್ಲದೇ ಜಿಲ್ಲಾಧಿಕಾರಿಗಳ ಅಶಯದಂತೆ ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸುವ ಆರೋಗ್ಯ ಇಲಾಖೆಯ ಸಚಿವರಿಗೆ ಮನವಿ ಮಾಡುವುದಾಗಿ ತಿಳಿಸಿದರು.
ಗಡಿಶಾಲೆಗಳಲ್ಲಿ ಕನ್ನಡ ಡಿಂಡಿಮ ಕಾರ್ಯಕ್ರಮ:
“ಗಡಿ ಶಾಲೆಗಳಲ್ಲಿ ಕನ್ನಡ ಡಿಂಡಿಮ” ಎಂಬ ಹೊಸ ಯೋಜನೆ ಜಾರಿಗೊಳಿಸಲಾಗುತ್ತಿದೆ. ಪ್ರತಿವರ್ಷ ಒಂದು ಕನ್ನಡ ಕಾರ್ಯಕ್ರಮ ಆರಂಭಿಸಲು 25 ಸಾವಿರ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಾ.ಸಿ.ಸೋಮಶೇಖರ್ ತಿಳಿಸಿದರು.
ಗಡಿಭಾಗದಲ್ಲಿ ಕನ್ನಡ ಅಸ್ಮಿತೆ ರಕ್ಷಣೆ ಜತೆಗೆ ಅಲ್ಲಿನ ಜನರ ಜತೆಗೆ ಭಾವನಾತ್ಮಕವಾಗಿ ಸರಕಾರವಿದೆ ಎಂಬ ವಿಶ್ವಾಸವನ್ನು ಮೂಡಿಸಬೇಕಿದೆ ಎಂದರು.
ಶಿಕ್ಷಕರ ಕೊರತೆ; ಪ್ರಸ್ತಾವ ಸಲ್ಲಿಸಲು ನಿರ್ದೇಶನ:
ಗಡಿಪ್ರದೇಶದಲ್ಲಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆಯ ಕುರಿತು ವಿಸ್ತೃತ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು
ಕನ್ನಡ ಶಾಲೆಗಳು ಇಲ್ಲದಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕನ್ನಡ ಶಾಲೆಯನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಸಚಿವರು ತಿಳಿಸಿರುತ್ತಾರೆ. ಆದ್ದರಿಂದ ಈ ಕುರಿತು ಪ್ರಸ್ತಾವ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಡಿಎಫ್ಓ ಹರ್ಷಭಾನು ಮಾತನಾಡಿ, ಹಲಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕದಂಬ ವನ ಸ್ಥಾಪಿಸಲು ಅರಣ್ಯ ಇಲಾಖೆಯು ಉತ್ಸುಕವಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರದಿಂದ ಅಗತ್ಯ ನೆರವು ನೀಡಬೇಕು ಎಂದು ಮನವಿ ಮಾಡಿಕೊಂಡರು.
ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ನಿಪ್ಪಾಣಿ ತಾಲ್ಲೂಕಿನಲ್ಲಿ ಹಂಚನಾಳ ಗ್ರಾಮದಲ್ಲಿ ಕನ್ನಡ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದು ಕಂಡುಬಂದಿರುತ್ತದೆ. ಮರಾಠಿ ಶಾಲೆಗಳು ಇರುವ ಕಡೆಗಳಲ್ಲಿ ಒಂದೆರಡು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿ ಕನ್ನಡ ಕಲಿಸುವ ಪ್ರಯತ್ನ ಮಾಡಬಹುದು ಎಂದು ಸಲಹೆ ನೀಡಿದರು.
ಕೆ.ಆರ್.ಡಿ.ಐ.ಎಲ್. ವತಿಯಿಂದ ಎರಡು ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿಕೊಡುವುದಾಗಿ ಎಂ.ಜಿ.ಹಿರೇಮಠ ಭರವಸೆ ನೀಡಿದರು.
ಬೆಳಗಾವಿ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಮಾತನಾಡಿ, ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದಂತೆ ಇಲಾಖೆಯು ಕಾರ್ಯನಿರ್ವಹಿಸಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಉಪಸ್ಥಿತರಿದ್ದರು.
ಉಪ ವಿಭಾಗಾಧಿಕಾರಿಗಳಾದ ಮಾಧವ ಗಿತ್ತೆ, ಬಲರಾಮ್ ಚವಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
***