ವಿಧಾನಸಭೆ ಚುನಾವಣೆ: ಉಚಿತ ಕೂಪನ್ ನಿರ್ಬಂಧ
ಬಾಡೂಟ, ಉಡುಗೊರೆ ಹಂಚಿಕೆ ಕಂಡುಬಂದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ
ಬೆಳಗಾವಿ, -ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಕಂಡುಬಂದರೆ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆಯನ್ನು ನೀಡಿದರು.
ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಮಾನ್ಯತೆ ಪಡೆದ ಹಾಗೂ ನೋಂದಾಯಿತ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಕೆಲವೊಂದು ನಿರ್ದೇಶನಗಳನ್ನು ಎಲ್ಲ ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು.
ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಆಮಿಷಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ. ಆ ಪ್ರಕಾರ ಜಿಲ್ಲೆಯಾದ್ಯಂತ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಬಾಡೂಟಕ್ಕೆ ಅವಕಾಶವಿಲ್ಲ- ಉಡುಗೊರೆ ನೀಡುವಂತಿಲ್ಲ:
ಚುನಾವಣೆಯ ಈ ಸಂದರ್ಭದಲ್ಲಿ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚಿಕೆ ಮಾಡುವಂತಿಲ್ಲ. ಒಂದು ವೇಳೆ ಇಂತಹ ವಸ್ತುಗಳ ವಿತರಣೆ ಕಂಡುಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.
ಬಾಡೂಟ ನೀಡುವಂತಿಲ್ಲ; ನಾಟಕ ಪ್ರದರ್ಶನವನ್ನು ಏರ್ಪಡಿಸುವಂತಿಲ್ಲ. ಯಾವುದೇ ರೀತಿಯ ಕೂಪನ್, ಉಚಿತ ಟಿಕೆಟ್, ಉಚಿತ ಪೆಟ್ರೋಲ್ ಕೂಪನ್ ನೀಡುವುದು ಮತದಾರರಿಗೆ ಆಮಿಷ ಒಡ್ಡಿದಂತಾಗುತ್ತದೆ. ಆದ್ದರಿಂದ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಇವುಗಳಿಗೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟವಾಗಿ ತಿಳಿಸಿದರು.
ಗಡಿಭಾಗದಲ್ಲಿ ವಸ್ತುಗಳ ಸಾಗಾಣಿಕೆ ಮೇಲೆ ನಿಗಾ ವಹಿಸಲು ಚೆಕ್ ಪೋಸ್ಟ್ ಸ್ಥಾಪಿಸಲಾಗುವುದು. ಜಿಲ್ಲೆಯ ಯಾವುದೇ ಉಗ್ರಾಣಗಳಲ್ಲಿ ಕುಕ್ಕರ್, ಸೀರೆ, ಗೃಹಬಳಕೆಯ ವಸ್ತುಗಳ ಅಕ್ರಮ ದಾಸ್ತಾನು ಕಂಡುಬಂದರೆ ಅಂತಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಮದ್ಯ ಸಾಗಾಣಿಕೆ ನಿಯಂತ್ರಣಕ್ಕೆ ಈಗಾಗಲೇ 21 ಚೆಕ್ ಪೋಸ್ಟ್ ಆರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಚೆಕ್ ಪೋಸ್ಟ್ ಆರಂಭಿಸಲಾಗುವುದು.
ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚೂತಪ್ಪದೇ ಪಾಲಿಸಬೇಕು. ಈ ಬಗ್ಗೆ ಎಲ್ಲ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡಬೇಕು.
ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ 33 ಜನರ ಗಡಿಪಾರು-ಜಿಲ್ಲಾಧಿಕಾರಿ ಎಚ್ಚರಿಕೆ:
ಇದುವರೆಗೆ ಜಿಲ್ಲೆಯಲ್ಲಿ 33 ಜನರನ್ನು ಗಡಿಪಾರು ಮಾಡಲಾಗಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವವರ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ತಿಳಿಸಿದರು.
ಪ್ರಚಾರ ಬ್ಯಾನರ್-ಅನುಮತಿ ಕಡ್ಡಾಯ:
ಬ್ಯಾನರ್ ಸೇರಿದಂತೆ ಯಾವುದೇ ರೀತಿಯ ಪ್ರಚಾರ ಸಾಮಗ್ರಿಗಳನ್ನು ಅಳವಡಿಸಲು ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಅನುಮತಿ ಇಲ್ಲದೇ ಯಾವುದೇ ರೀತಿಯ ಬ್ಯಾನರ್ ಅಥವಾ ಪ್ರಚಾರ ಸಾಮಗ್ರಿಗಳನ್ನು ಅಂಟಿಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು.
ಯಾವುದೇ ಸರಕಾರಿ ನೌಕರರು ಚುನಾವಣಾ ಪ್ರಚಾರ ಅಥವಾ ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 80 ವರ್ಷ ಪೂರ್ಣಗೊಳಿಸಿರುವ ಮತದಾರರನ್ನು ಗುರುತಿಸಿ ಅವರಿಗೆ ಪೋಸ್ಟಲ್ ಬ್ಯಾಲೆಟ್ ನೀಡಲಾಗುವುದು.
ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ವಹಿಸಲು ಪ್ರತ್ಯೇಕವಾದ ತಂಡಗಳನ್ನು ರಚಿಸಲಾಗುವುದು. ಆದ್ದರಿಂದ ದ್ವೇಷಪೂರಿತ ವಿಷಯಗಳನ್ನು ಹಂಚಿಕೊಳ್ಳಬಾರದು ಎಂದು ತಿಳಿಸಿದರು.
ಮಾದರಿ ನೀತಿಸಂಹಿತೆ ಶೀಘ್ರದಲ್ಲೇ ಜಾರಿಯಾಗಲಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ನೇಮಕ, ತರಬೇತಿ ಸೇರಿದಂತೆ ಪ್ರತಿಯೊಂದು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಕ್ರಮಗಳ ಬಗ್ಗೆ ಮಾಹಿತಿ ನೀಡಲು ಮನವಿ:
ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆಸೆ-ಆಮಿಷ ಅಥವಾ ಉಡುಗೊರೆ ನೀಡುವುದು ಕಂಡುಬಂದರೆ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ನೇರವಾಗಿ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದರು.
ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಲು ಮನವಿ:
ನ್ಯಾಯಸಮ್ಮತ, ಭಯಮುಕ್ತ ಹಾಗೂ ಯಾವುದೇ ರೀತಿಯ ಆಸೆ-ಆಮಿಷವಿಲ್ಲದಂತೆ ಚುನಾವಣೆ ನಡೆಸುವುದು ನಮ್ಮೆಲ್ಲರ ಮುಖ್ಯ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಪಕ್ಷಗಳ ಪಾತ್ರ ಬಹಳ ಪ್ರಮುಖವಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಮನವಿ ಮಾಡಿಕೊಂಡರು.
ಮತದಾರರು ಮುಕ್ತವಾಗಿ ಮತ್ತು ನಿರ್ಭೀತರಾಗಿ ಮತ ಚಲಾಯಿಸುವಂತಹ ಅವಕಾಶ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ.
ಚುನಾವಣಾ ಪ್ರಕ್ರಿಯೆಗೆ ಯಾವುದೇ ರೀತಿಯ ಅಡ್ಡಿ-ಆತಂಕವನ್ನು ಉಂಟು ಮಾಡುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಿದೆ.
ಎಲ್ಲ ರಾಜಕೀಯ ಪಕ್ಷಗಳು ಪರಸ್ಪರ ಸಹಕಾರದ ಮೂಲಕ ಶಾಂತಿಯುತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆಯಾ ಪಕ್ಷದ ಪದಾಧಿಕಾರಿಗಳಿಗೆ ಸೂಕ್ತ ತಿಳಿವಳಿಕೆ ನೀಡಬೇಕು ಎಂದು ಪೊಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಸಲಹೆ ನೀಡಿದರು.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮುಖ್ಯ ಚುನಾವಣಾ ಆಯುಕ್ತರ ಸಭೆಯಲ್ಲಿ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ನಿಯಮ ಉಲ್ಲಂಘಿಸಿದರೆ ಮುಲಾಜಿಲ್ಲದೇ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.
ಪ್ರತಿಯೊಬ್ಬರಿಗೂ ಸಮಾನ ಅವಕಾಶವಿರುತ್ತದೆ. ಆದ್ದರಿಂದ ಪ್ರಚಾರ ಸಂದರ್ಭದಲ್ಲಿ ಇನ್ನೊಬ್ಬರಿಗೆ ತೊಂದರೆ ನೀಡಬಾರದು.
ಮಹಾರಾಷ್ಟ್ರ, ಗೋವಾ ರಾಜ್ಯ ಮತ್ತು ನೆರೆ ಜಿಲ್ಲೆಯ ಗಡಿಭಾಗಗಳಲ್ಲಿ ನಿಗಾ ವಹಿಸಲಾಗಿರುತ್ತದೆ.
ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಈ ಬಗ್ಗೆ ನಿಯಮಿತವಾಗಿ ಸಭೆಗಳನ್ನು ನಡೆಸಿ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಆದ್ದರಿಂದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹರ್ಷಲ್ ಭೋಯರ್ ಅವರು ಮಾತನಾಡಿ, ಅಕ್ರಮವಾಗಿ ಹಣ, ಮದ್ಯ ಸಾಗಾಣಿಕೆ ತಡೆಗೆ ಸಂಬಂಧಿಸಿದಂತೆ ಈಗಾಗಲೇ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿವೆ ಎಂದರು.
ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿಕೊಂಡರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ ಸೇರಿದಂತೆ ಜಿಲ್ಲೆಯ ಎಲ್ಲ ಮತಕ್ಷೇತ್ರಗಳ ಚುನಾವಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
***