ಬೆಳಗಾವಿ-ಕೋವಿಡ್- ೧೯ ಸಾಂಕ್ರಾಮಿಕ ರೋಗದಿಂದ ಪಾರಾಗಲು ಮುಖಕ್ಕೆ ಮಾಸ್ಕ್ ಧರಿಸುವುದು; ಸೋಪಿನಿಂದ ಕೈ ತೊಳೆಯುವುದು , ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರವು 18 ನೇ ಜೂನ್ ಅನ್ನು ಮಾಸ್ಕ್ ದಿನವನ್ನಾಗಿ ಘೋಷಿಸಿರುವುದರಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ವತಿಯಿಂದ ಗುರುವಾರ (ಜೂ.18) ಮಾಸ್ಕ್ ದಿನವನ್ನು ಆಚರಿಸಲಾಯಿತು.
ನಗರದ ಅಶೋಕ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಜಾಗೃತಿ ಜಾಥಾ ಕೈಗೊಳ್ಳುವದರ ಮೂಲಕ ಮಾಸ್ಕ್ ಧರಿಸುವುದರ ಅವಶ್ಯಕತೆಯನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು.
ಜನರಿಗೆ ಹೂ ನೀಡಿ ಜಾಗೃತಿ :
ಜಾಗೃತಿ ವೇಳೆ ಅಧಿಕಾರಿಗಳು ಬೈಕ್ ಸವಾರರಿಗೆ ಹೂ ನೀಡುವ ಮೂಲಕ ಮಾಸ್ಕ್ ಧರಿಸುವುದರ ಬಗ್ಗೆ ಜಾಗೃತಿ ಮೂಡಿಸಿದರು. ಇದೇ ವೇಳೆಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಂಡು ಜನ ಜಾಗೃತಿ ಮೂಡಿಸಿದರು.
ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಬಗ್ಗೆ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು.
ಈ ವೇಳೆ ಮಾತನಾಡಿದ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು, ಬರುವ ದಿನಗಳಲ್ಲಿ ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು. ಆದ್ದರಿಂದ ಕೋವಿಡ್-೧೯ ರೋಗದಿಂದ ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜನರಿಗೆ ಜಾಗೃತಿ ಮೂಡಿಸಲು ಮಾಸ್ಕ್ ದಿನಾಚರಣೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಯಾರಾದರು ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಅಂತವರ ಮೇಲೆ ಕ್ರಮಕೈಗೊಳ್ಳಲಾಗುತ್ತದೆ. ಮಾಸ್ಕ್ ಧರಿಸದೇ ಇರುವರ ಮೇಲೆ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಲಿದೆ. ಅದಕ್ಕಾಗಿ ಪ್ರತಿಯೊಬ್ಬ ವ್ಯಕ್ತಿಯೂ ಜಿಲ್ಲಾಡಳಿತ ಹಾಗೂ ಸರ್ಕಾರದ ಮಾರ್ಗದರ್ಶನವನ್ನು ಪಾಲನೆ ಮಾಡಬೇಕು ಎಂದು ಅವರು ಕರೆ ನೀಡಿದರು.
ಮಾಸ್ಕ್ ದಿನಾಚರಣೆಯ ಜಾಗೃತಿ ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ, ನಗರ ಪೊಲೀಸ್ ಆಯುಕ್ತ ಬಿ.ಎನ್. ಲೋಕೇಶ್ ಕುಮಾರ್, ಕೋವಿಡ್-೧೯ ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ ಸಿಇಒ ಡಾ. ರಾಜೇಂದ್ರ ಕೆ.ವಿ. ಮತ್ತಿತರರು ಭಾಗವಹಿಸಿದ್ದರು.
***