ಬೆಂಗಳೂರು: ರಾಜ್ಯದಲ್ಲಿ ಚಂಡಮಾರುತ ಎಫೆಕ್ಟ್ ನಿಂದಾಗಿ ಮೇ ತಿಂಗಳು ಪೂರ್ತಿ ಸುರಿದ ಮಳೆಯಿಂದಾಗಿ ರಾಜ್ಯದ ಜನ ತತ್ತರಿಸಿದ ಬೆನ್ನಲ್ಲಿಯೇ ಈಗ ಮುಂಗಾರು ಮಳೆ ಶುರುವಾಗಲಿದೆ. ಜೂನ್ 5 ರಿಂದ ಬೆಳಗಾವಿಯಲ್ಲೂ ಮುಂಗಾರು ಪ್ರವೇಶ ಮಾಡಲಿದೆ.
ಬಹು ನಿರೀಕ್ಷಿತ ಮುಂಗಾರು ಆರಂಭ ರಾಜ್ಯದಲ್ಲಿ ವಿವಿಧ ಕಾರಣಗಳಿಂದ ವಿಳಂಬವಾಗಿದ್ದು, ಜೂನ್ 5ಕ್ಕೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಈ ಹಿಂದೆ ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ, ಮುಂಗಾರು ಕೊಂಚ ವಿಳಂಬವಾಗಲಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ತದನಂತರ ಜೂನ್ 5ಕ್ಕೆ ರಾಜ್ಯದಲ್ಲೂ ಮುಂಗಾರು ಆರಂಭವಾಗಲಿದೆ ಎಂದು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಇಡೀ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಅದೇ ರೀತಿಯಾಗಿ ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹೇಳಿದೆ.
ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ.
ಮಾನ್ಸೂನ್ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದರೆ, ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10 ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸುತ್ತದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ