Breaking News

ಮೇ 15 ರ ಬಳಿಕ ಬೆಳಗಾವಿ ನಗರದ ಕಂಟೈನ್ಮೇಂಟ್ ಝೋನ್ ಇರುವುದಿಲ್ಲ

ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ
———————————————————-
ಗಡಿ ಪ್ರವೇಶಿಸುವ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ದೇಶನ

ಬೆಳಗಾವಿ,-ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಆದ್ದರಿಂದ ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು.

ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದ ಆವರಣದಲ್ಲಿ ಸೋಮವಾರ (ಮೇ 11) ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬೇರೆ ರಾಜ್ಯಗಳಲ್ಲಿ ಮೃತಪಟ್ಟಿರುವವರನ್ನು ರಾಜ್ಯಕ್ಕೆ ಕರೆತರದೇ ಆಯಾ ರಾಜ್ಯಗಳಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು.

ಹೆಚ್ಚು ಹೆಚ್ಚು ಪ್ರಕರಣಗಳು ವರದಿಯಾಗಿದ್ದರೂ ಕೂಡ ಸುದೈವದಿಂದ ಜೀವಹಾನಿ ಪ್ರಮಾಣ ಕಡಿಮೆಯಾಗಿದೆ. ಇದುವರೆಗೆ ವೆಂಟಿಲೇಟರ್ ಬಳಕೆ ಹಂತಕ್ಕೆ ಪರಿಸ್ಥಿತಿ ತಲುಪಿಲ್ಲ ಎಂದರು.
ಸೋಂಕಿತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ ನೆಗೆಟಿವ್ ಬಂದ ಬಳಿಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿದ ಬಳಿಕ ಮನೆಗೆ ಕಳಿಸಬೇಕು ಎಂದರು.
ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಬಿಮ್ಸ್ ನಿರ್ದೇಶಕರಿಂದ ಮಾಹಿತಿಯನ್ನು ಪಡೆದುಕೊಂಡರು.
ಕೈಗಾರಿಕೆಗಳು ಮತ್ತು ಇತರೆ ವಾಣಿಜ್ಯ-ಆರ್ಥಿಕ ವಹಿವಾಟು ಆರಂಭಗೊಂಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ವಿದ್ಯುತ್ ಬಿಲ್; ಜನರಿಗೆ ಹೊರೆಯಾಗದಿರಲಿ:

ಎರಡು ತಿಂಗಳಿನ ವಿದ್ಯುಚ್ಛಕ್ತಿ ಬಿಲ್ ಒಮ್ಮೆಲೆ ನೀಡುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ‌. ಈ ಬಗ್ಗೆಯೂ ಪರಿಶೀಲಿಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಸಚಿವ ಜಗದೀಶ್ ಶೆಟ್ಟರ್ ಅವರು ನಿರ್ದೇಶನ ನೀಡಿದರು.

ಈ ಬಗ್ಗೆ ಹೆಸ್ಕಾಂ ಹಿರಿಯ ಅಧಿಕಾರಿಗಳ ಜತೆ ಸಭೆಯಲ್ಲಿಯೇ ದೂರವಾಣಿಯ ಮೂಲಕ ಮಾತನಾಡಿದ ಸಚಿವರು, ಸಾರ್ವಜನಿಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಕಂತುಗಳಲ್ಲಿ ಬಿಲ್ ಪಾವತಿಸಲು ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ನಿರಂತರವಾಗಿ 45 ದಿನಗಳಿಗಿಂತ ಅಧಿಕ ಕಾಲ ಕಂಟೈನ್ಮೆಂಟ್ ಝೋನ್ ಆಗಿರುವ ಪ್ರದೇಶಗಳಲ್ಲಿ ಸ್ವಲ್ಪಮಟ್ಟಿಗೆ ವಿನಾಯಿತಿ ನೀಡುವುದರ ಬಗ್ಗೆ ಸರ್ಕಾರಕ್ಕೆ ಒಂದು ಪ್ರಸ್ತಾವ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅದೇ ರೀತಿ ದಾನಿಗಳಿಂದ ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸಿ ಕಂಟೈನ್ಮೆಂಟ್ ಝೋನ್ ನಲ್ಲಿ ವಿತರಿಸುವ ಬಗ್ಗೆಯೂ ಪರಿಶೀಲಿಸುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಅವರು ಗಡಿಭಾಗದಲ್ಲಿ ಸಿಲುಕಿರುವ ಪ್ರಯಾಣಿಕರು ಮತ್ತು ವಲಸೆ ಕಾರ್ಮಿಕರು ಎಸುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಶಾಸಕ ಅಭಯ್ ಪಾಟೀಲ ಮಾತನಾಡಿ, ಜಿಲ್ಲೆಯ ಎಲ್ಲ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿ ಮಾತ್ರೆ ನೀಡುವ ಬಗ್ಗೆ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ಮಹಾನಗರ ಪಾಲಿಕೆಯ ಪರಿಷ್ಕೃತ ತೆರಿಗೆ ನೀಡುವುದಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಮೇ 22 ರ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ:

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲೆಯಲ್ಲಿ 250 ವಲಸೆ ಕಾರ್ಮಿಕರಿದ್ದು, ಅವರ ಕ್ವಾರಂಟೈನ್ ಗೆ ಆದ್ಯತೆ ನೀಡಲಾಗುವುದು. ಶೀಘ್ರ ಯಳ್ಳೂರ, ಪೀರನವಾಡಿ ಕಂಟೈನ್ಮೆಂಟ್ ಝೋನ್ ಆದೇಶ ಡಿನೋಟಿಫೈ ಮಾಡಲಾಗುವುದು. ಮೇ 15 ರ ಬಳಿಕ ಬೆಳಗಾವಿ ನಗರದ ಕಂಟೈನ್ಮೇಂಟ್ ಝೋನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕುಡಚಿಯಲ್ಲಿ 1300 ಕ್ಕೂ ಅಧಿಕ ಜನರ ಗಂಟಲು ದ್ರವ ಪರೀಕ್ಷಿಸಲಾಗಿದೆ. ಯಾವುದೇ ಹೊಸ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗದಿದ್ದರೆ ಮೇ 22 ರ ಬಳಿಕ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ ಎಂದು ತಿಳಿಸಿದರು.
ಹೋಟೆಲ್ ನಲ್ಲಿ ಕ್ವಾರಂಟೈನ್ ಇದ್ದ 462 ಜನರನ್ನು ಬಿಡುಗಡೆ ಮಾಡಲಾಗಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಈಗಾಗಲೇ ಶೇ.85 ರಷ್ಟು ಆಹಾರಧಾನ್ಯ ವಿತರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅತೀ ಹೆಚ್ಚು ಮಾದರಿ ಪರೀಕ್ಷೆ:

ಜಿಲ್ಲಾ ಕೋವಿಡ್-೧೯ ಉಸ್ತುವಾರಿ ಅಧಿಕಾರಿ ರಾಜೇಂದ್ರ ಚೋಳನ್, ಕಳೆದ ಹತ್ತು ದಿನಗಳಲ್ಲಿ ಅತೀ ಹೆಚ್ಚು ಮಾದರಿ ಪರೀಕ್ಷೆ ಬೆಳಗಾವಿಯಲ್ಲಿ ನಡೆಸಲಾಗಿದ್ದು, ಇದುವರೆಗೆ ಸುಮಾರು7 ಸಾವಿರ ಮಾದರಿಗಳನ್ನು ಪರೀಕ್ಷಿಸಲಾಗಿರುತ್ತದೆ. ಬೆಂಗಳೂರು ಹೊರತುಪಡಿಸಿದರೆ ಇದು ಅತೀ ಹೆಚ್ಚಿನ ಸಂಖ್ಯೆಯಾಗಿದೆ ಎಂದರು.
ಹಿರೇಬಾಗೇವಾಡಿ, ಕುಡಚಿ ಪ್ರದೇಶದಲ್ಲಿ ಬಹುತೇಕ ಮಾದರಿ ಸಂಗ್ರಹಿಸಲಾಗುತ್ತಿದೆ. ಸೋಂಕು ದೃಢಪಟ್ಟಿರುವ ಬಹುತೇಕ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ ಎಲ್ಲರ ಮಾದರಿ ಪರೀಕ್ಷೆ ನಡೆಸಲಾಗಿದೆ ಎಂದು ರಾಜೇಂದ್ರ ಚೋಳನ್ ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಡಾ. ಪ್ರಭಾಕರ್ ಕೋರೆ, ರಂಜಾನ್ ಹಿನ್ನೆಲೆಯಲ್ಲಿ ಸಮುದಾಯದ ಮುಖಂಡರು ಲಾಕ್ ಡೌನ್ ಇನ್ನೂ ಮುಂದುವರಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರಿಗೆ ಮನವಿ ಮಾಡಿಕೊಂಡರು.

ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ವ್ಯಾಪಾರ-ವಹಿವಾಟು ಅವಧಿಯನ್ನು ಇನ್ನಷ್ಟು ವಿಸ್ತರಿಸುವ ಬಗ್ಗೆ ಪರಿಶೀಲಿಸಬೇಕು ಎಂದರು.
ಸ್ಥಳೀಯ ಸಂಸ್ಥೆಗಳ ತೆರಿಗೆ ಪರಿಷ್ಕರಣೆಯನ್ನು ಪ್ರಸಕ್ತ ವರ್ಷ ಮುಂದೂಡಿಕೆಗೆ ನಿರ್ದೇಶನ ನೀಡಬೇಕು ಎಂದರು.

ಅಂತರ್ ರಾಜ್ಯ ಸಂಚಾರಕ್ಕೆ ಪ್ರತಿದಿನ ಪಾಸ್ ವಿತರಣೆಯ ಸಂಖ್ಯೆಯನ್ನು ನಿಗದಿಪಡಿಸಿದರೆ ಜಿಲ್ಲೆಯ ಗಡಿಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲೆಯಲ್ಲಿ ಒಟ್ಟು 6121 ಪ್ರಕರಣಗಳು ನೆಗೆಟಿವ್ ಬಂದಿರುತ್ತವೆ ಎಂದು ವಿವರಿಸಿದರು.
ಶಾಸಕರಾದ ಅನಿಲ್ ಬೆನಕೆ, ಪೊಲೀಸ್ ಆಯುಕ್ತರಾದ ಬಿ‌.ಎಸ್.ಲೋಕೇಶ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *