ಬೆಳಗಾವಿ, ಡಿ. ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಮದುರ್ಗ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು.
ಸರಕಾರ ಜನಪ್ರಿಯವಾದರೆ ಸಾಲದು; ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ.ನಮ್ಮ ಸರಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ.
ಮಹಾರಾಷ್ಟ್ರ, ತಮಿಳುನಾಡು, ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1800 ಗ್ರಾಮ ಪಂಚಾಯತಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಅದೇ ರೀತಿ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.
ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ:
ಗಡಿಯಾಚೆ ಇರುವವರು ನಮ್ಮವರು; ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರಕಾರ ಕಡೆಗಣಿಸಿರುವುದರಿಂದ. ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ.ಗಡಿಭಾಗದ ಶಾಲೆಗಳ ಅಭಿವೃದ್ದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂಪಾಯಿ ಖರ್ಚು ಮಾಡಲಾಗುವುದು.
ಗೋವಾದಲ್ಲಿ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಅದೇ ರೀತಿ
ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ ಹತ್ತು ಕೋಟಿ ರೂಪಾಯಿಗಳನ್ನು ಸರಕಾರ ನೀಡಲಿದೆ. ಎಂದು ಸಿಎಂ ಹೇಳಿದ್ರು.
ಹತ್ತು ಲಕ್ಷಕ್ಕೂ ಅಧಿಕ ಮಕ್ಕಳಿಗೆ 600 ಕೋಟಿ ರೂಪಾಯಿ ಶಿಷ್ಯವೇತನವನ್ನು ರೈತ ವಿದ್ಯಾನಿಧಿ ಯೋಜನೆ ಮೂಲಕ ಒದಗಿಸಲಾಗಿದೆ.ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.
ಎಲ್ಲ ಸಮುದಾಯಗಳಿಗೆ ಸರಕಾರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸಲಾಗಿದೆ.ಕಾಯಕ, ಸ್ತ್ರೀ ಸಾಮರ್ಥ್ಯ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ.
ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಹಿಂದಿನ ಸರಕಾರಗಳಿಗೆ ಇಚ್ಛಾಶಕ್ತಿ ಇಲ್ಲದಿರುವುದರಿಂದ ಪರಿಶಿಷ್ಟ ಜಾತಿ/ಪಂಗಡಗಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ಆದರೆ ಯಾವುದೇ ಟೀಕೆ-ಟಿಪ್ಪಣಿಗೆ ಸೊಪ್ಪುಹಾಕದೇ ಪರಿಶಿಷ್ಟ ಜಾತಿ/ಪಂಗಡಗಳ ಸಮುದಾಯದ ಮೀಸಲಾತಿ ಹೆಚ್ಚಿಸುವ ದಿಟ್ಟ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ.
ಬೆಳಗಾವಿ ಕರ್ನಾಟಕದ ಕಿರೀಟ:
ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯು ರಾಜ್ಯದ ಕಿರೀಟವಿದ್ದಂತೆ. ಈ ಜಿಲ್ಲೆಯ ನೀರಾವರಿ, ಕೈಗಾರಿಕೋದ್ಯಮ, ಕೃಷಿ ಅಭಿವೃದ್ಧಿಗೆ ಸರಕಾರ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು.ಉತ್ತರ ಕರ್ನಾಟಕದ ಸಮಗ್ರ ಪ್ರಗತಿಗೆ ಮುಂಬರುವ ದಿನಗಳಲ್ಲಿ ಸರಕಾರ ವಿಶೇಷ ಯೋಜನೆ ಪ್ರಕಟಿಸಲಿದೆ ಎಂದು ಹೇಳಿದರು.
ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಚಿವರಾದ ಮುರುಗೇಶ್ ನಿರಾಣಿ, ನಗರಾಭಿವೃದ್ಧಿ ಸಚಿವರಾದ ಬಿ.ವಿ.ಬಸವರಾಜ್(ಭೈರತಿ), ಕೆಎಂಎಫ್ ಅಧ್ಯಕ್ಷರಾದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕರಾದ ಅನಿಲ್ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.