ಬೆಳಗಾವಿ : ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಮುಂಗಾರು ಬೆಳೆಹಾನಿ ಆಗಿರುವ ಕುರಿತು ಒಂದು ವಾರದೊಳಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಪಶು ಸಂಗೋಪನೆ ಇಲಾಖೆಯ ನಿರ್ದೇಶಕ ಮಹೇಶ್ ಹೇಳಿದರು.
ಅವರು ಶನಿವಾರ ಜಿಲ್ಲೆಗೆ ಭೇಟಿ ನೀಡಿದ್ದ ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿ ಕ್ರಾಸ್ ಬಳಿಯ ಹೊಲದಲ್ಲಿ ಹಾನಿಗೊಳಗಾಗಿರುವ ಹತ್ತಿ ಮತ್ತು ಸೂರ್ಯಕಾಂತಿ ಬೆಳೆಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಾಗಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಪ್ರಕಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.
ಬೆಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ನೀಡುವ ಸಮಗ್ರ ವರದಿ ಹಾಗೂ ಕ್ಷೇತ್ರ ಭೇಟಿ ವೇಳೆ ಅಧ್ಯಯನ ತಂಡ ಕಂಡುಕೊಂಡ ಪರಿಸ್ಥಿತಿಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಲಾಗುತ್ತದೆ. ಬೆಂಗಳೂರಿನಲ್ಲಿ ಸೋಮವಾರ(ನ.19) ಕೇಂದ್ರ ಬರ ಅಧ್ಯಯನ ತಂಡದ ಮುಖಸ್ಯರ ಜತೆ ಸಭೆ ನಡೆಯಲಿದ್ದು, ಒಟ್ಟಾರೆ ರಾಜ್ಯದ ಪರಿಸ್ಥಿತಿ ಕ್ರೋಢೀಕರಿಸಿ ಸಿದ್ಧಪಡಿಸುವ ವರದಿಯನ್ನು ಭಾರತ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಯನ್ನು ವಿವರಿಸಿದರು.
ಜಿಲ್ಲೆಯ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿದರು.
ಗೊರಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಶಿಡೋಣಿ ಗ್ರಾಮದ ಈರಬಸವ್ವ ಕೆಂಚನಗೌಡ್ರ ಅವರ 2.29 ಎಕರೆ ಜಮೀನಿನಲ್ಲಿ ನಾಶಗೊಂಡಿರುವ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರು ಪರಿಶೀಲಿಸಿದರು.
ಮಹೇಶ್ ನೇತೃತ್ವದ ತಂಡದಲ್ಲಿ ಕೇಂದ್ರ ಜಲ ಆಯೋಗದ ನಿರ್ದೇಶಕ ಓ.ಆರ್.ಕೆ. ರೆಡ್ಡಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ನೀತಾ ತಹಿಲ್ಲಾನಿ ಇದ್ದರು.
ಜಿಪಂ ಸಿಇಒ ರಾಮಚಂದ್ರನ್,ಆರ್. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ