ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ
………………………………………….……..
ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಬೆಳಗಾವಿಯ ಶಿವಬಸವ ನಗರದಲ್ಲಿರುವ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೆಬ್ರುವರಿ 28, 29 ರಂದು ನಡೆಯಲಿರುವ ಬೆಳಗಾವಿ – ಹುಬ್ಬಳ್ಳಿ -ಧಾರವಾಡ ಜಿಲ್ಲೆಗಳ ಪ್ರಾದೇಶಿಕ ಉದ್ಯೋಗ ಮೇಳದ ಅಂಗವಾಗಿ ಅಭಿವೃದ್ಧಿಪಡಿಸಲಾಗಿರುವ ವಿಶೇಷ ಅಂತರ್ಜಾಲ ತಾಣ(www.belagaviudyogamela.in) ವನ್ನು ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ( ಫೆ.16 ) ಅನಾವರಣಗೊಳಿಸಿ ಅವರು ಮಾತನಾಡಿದರು.
ಫೆ. ೨೮ ಹಾಗೂ ೨೯ ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳೆ ನಡೆಯಲಿದ್ದು, ಈ ಉದ್ಯೋಗ ಮೇಳದಲ್ಲಿ ೧೫೦ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು ೧೫ ರಿಂದ ೧೬ ಸಾವಿರ ಜನರು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು ಹೊರತುಪಡಿಸಿ ಪ್ರಥಮ ಬಾರಿಗೆ ದೊಡ್ಡಮಟ್ಟದ ಉದ್ಯೋಗ ಮೇಳ ಬೆಳಗಾವಿಯಲ್ಲಿ ಮಾಡುತ್ತಿದ್ದೇವೆ. ಈ ಉದ್ಯೋಗ ಮೇಳಕ್ಕೆ ಎಲ್ಲರ ಸಹಕಾರ ಮುಖ್ಯ. ಉದ್ಯೋಗಮೇಳ ಮಾಡುವುದರಿಂದ ಯುವಕರಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಅಭಿಪ್ರಾಯಪಟ್ಟರು.
ಉದ್ಯೋಗ ಮೇಳ ಹಾಗೂ ಹೂಡಿಕೆದಾರರ ಸಮಾವೇಶಗಳ ಮೂಲಕ ಉತ್ತರ ಕರ್ನಾಟಕದಲ್ಲಿ ಒಂದು ಪ್ರಯೋಗ ಮಾಡುತ್ತಿದ್ದೇವೆ. ಈ ಪ್ರಯತ್ನ ಮುಂದುವರೆಯಲಿದ್ದು ಬೆಳಗಾವಿಯಲ್ಲಿ ೧ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಗಲಿದೆ. ಮುಂದಿನ ದಿನಗಳಲ್ಲಿ ಕಿತ್ತೂರು ಹುಬ್ಬಳ್ಳಿ ರೈಲ್ವೆ ಮಾರ್ಗ ಆದರೆ ಬೆಳಗಾವಿ, ಹುಬ್ಬಳ್ಳಿ ಹಾಗೂ ಧಾರವಾಡ ನಗರಗಳನ್ನು ತ್ರಿವಳಿ ನಗರ ಮಾಡುವುದು ನಮ್ಮ ಕನಸಾಗಿದೆ ಎಂದು ಸಚಿವ ಶೆಟ್ಟರ್ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಜಿಲ್ಲಾಡಳಿತ ಬೆಳಗಾವಿ, ಧಾರವಾಡ ಹಾಗೂ ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಫೆಬ್ರುವರಿ ೨೮ ಹಾಗೂ ೨೯ ರಂದು ಉದ್ಯೋಗ ಮೇಳ ನಡೆಯಲಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ತಯಾರಿ ಮಾಡಿಕೊಳ್ಳಲು ಪೂರ್ವಭಾವಿ ಸಭೆಯನ್ನು ಈಗಾಗಲೇ ಮಾಡಲಾಗಿದೆ. ಸುಮಾರು ೧೫೦ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿ ಆಗುವ ನಿರೀಕ್ಷೆಯಿದೆ ಎಂದು ತಿಳಿದರು.
ಧಾರವಾಡ, ಬೆಳಗಾವಿ ಹಾಗೂ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ಜತೆ ಮಾತನಾಡಿದ್ದೇವೆ. ಉದ್ಯೋಗ ಮೇಳಕ್ಕೆ ಸುಮಾರು ೧೬೦೦೦ ಜನ ಬರುವ ನಿರೀಕ್ಷೆ ಇದೆ. ಇಂದು ಉದ್ಘಾಟನೆ ಮಾಡುವ ವೆಬ್ ಸೈಟ್ ನಲ್ಲಿ ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ದೊರೆಯಲಿದೆ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಾಜಿ ಶಾಸಕ ಸಂಜಯ ಪಾಟೀಲ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ. ಎಚ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.
****