Breaking News

ನೆರೆ ಪರಿಹಾರ ಅಧಿಕಾರಿಗಳ ವಿರುದ್ಧ ಶಾಸಕರ ಪ್ರಹಾರ….!!

ಬೆಳಗಾವಿ- ನೆರೆ ಪರಿಹಾರ ಬೆಳೆ ಪರಿಹಾರದ ಕುರಿತು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಳಗಾವಿ ಜಿಲ್ಲೆಯ ಶಾಸಕರು ಕೆಡಿಪಿ ಸಭೆಯಲ್ಲಿ ಒಮ್ಮತದಿಂದ ಆಕ್ರೋಶವನ್ನು ಹೊರಹಾಕಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು ಶಾಸಕರಾದ ಮಹಾಂತೇಶ ದೊಡ್ಡಗೌಡರ,ಮಹೇಶ ಕುಮಟೊಳ್ಳಿ,ದುರ್ತೋದನ್ ಐಹೊಳೆ ಅವರು ಸಭೆಯಲ್ಲಿ ಮಾತನಾಡಿ ತಮ್ಮ ಕ್ಷೇತ್ರಗಳಲ್ಲಿ ಸರ್ವೇ ಕಾರ್ಯ ಸರಿಯಾಗಿ ಆಗಿಲ್ಲ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದರೆ,ಶಾಸಕ ಅಭಯ ಪಾಟೀಲ ಬೆಳಗಾವಿ ನಗರದ ರಸ್ತೆಗಳು ಹಾಳಾಗಿವೆ,ಅಧಿಕಾರಿಗಳು ಹಳೆಯ ಸರ್ಕಾರದ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ ನೆರೆ ಪರಿಹಾರದ ವಿಷಯದಲ್ಲಿ ಅನೇಕ ಲೋಪದೋಷಗಳಾಗುವೆ ಎಂದು ಆರೋಪಿಸಿದ್ರು

ಶಾಸಕರು ತಮ್ಮ ಆಕ್ರೋಶ ಹೊರಹಾಕಿದಾಗ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ ನೆರೆಪರಿಹಾರದ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ ಎಂದು ಡಿಸಿ ಅವರಿಗೆ ಸೂಚನೆ ನೀಡಿದರು ಜೊತೆಗೆ
ಜನಸಂಚಾರಕ್ಕೆ ಅಗತ್ಯವಿರುವ ಮುಖ್ಯ ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ಹತ್ತು ದಿನಗಳಲ್ಲಿ ಪೂರ್ಣಗೊಳಿಸಬೇಕು. ಈಗಾಗಲೇ ವಿಳಂಬವಾಗಿದ್ದು, ಇನ್ನಷ್ಟು ವಿಳಂಬವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು.

ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ ಮತ್ತಿತರ ಮೂಲಸೌಕರ್ಯಗಳನ್ನು ಪುನರ್ ನಿರ್ಮಿಸಲು ಸರ್ಕಾರ ಈಗಾಗಲೇ ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗಳಿಗೆ ಹಣ ಬಿಡುಗಡೆ ಮಾಡಿದ್ದು, ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಎಲ್ಲ ಕೆಲಸಗಳನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರವಾಹ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆ ತೀವ್ರ ಹದಗೆಟ್ಟಿದೆ. ಆದರೆ ಅಥಣಿ, ಸವದತ್ತಿ ಸೇರಿದಂತೆ ಕೆಲವು ತಾಲ್ಲೂಕುಗಳಲ್ಲಿ ಇದುವರೆಗೆ ವಿದ್ಯುತ್ ಸಂಪರ್ಕ ಹಾಗೂ ರೈತರ ಪಂಪಸೆಟ್ ಗಳಿಗೆ ಸಂಪರ್ಕ ನೀಡದಿರುವುದು ಕಂಡುಬಂದಿದೆ. ಆದ್ದರಿಂದ ಇನ್ನು ಹದಿನೈದು ದಿನಗಳಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಪ್ರವಾಹದಿಂದ ಉಂಟಾದ ಹಾನಿ ಸರಿಪಡಿಸುವುದು ಆದ್ಯತೆ ನೀಡಬೇಕು. ರಾಜ್ಯಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ವಿಷಯಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.
ಅಧಿಕಾರಿಗಳು ಜನಪ್ರತಿನಿಧಿಗಳ ಸೂಚನೆಗೆ ಕಾಯದೇ ಸ್ವಯಂಪ್ರೇರಣೆಯಿಂದ ಜನಪರ ಕೆಲಸ ಮಾಡಬೇಕು.
ಬೆಳಗಾವಿ ಜಿಲ್ಲಾ ಪಂಚಾಯತಿಗೆ ಶಾಸನಬದ್ಧ ಅನುದಾನದ ಪ್ರಮಾಣ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವರ ಜತೆ ವಿಸ್ತ್ರತ ಚರ್ಚೆ ನಡೆಸಲಿದ್ದೇನೆ.
ಮುಂಬರುವ ದಿನಗಳಲ್ಲಿ ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಿ ಜನರ ಸಮಸ್ಯೆ ಆಲಿಸುತ್ತೇನೆ ಎಂದು ಭರವಸೆ ನೀಡಿದ ಸಚಿವ ಶೆಟ್ಟರ್ ಅವರು, ಬೆಳೆಪರಿಹಾರ ತಾರತಮ್ಯ ಸರಿಪಡಿಸಬೇಕು ಎಂದು ತಿಳಿಸಿದರು.

ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶಾಸನಬದ್ಧ ಅನುದಾನ ಪ್ರಮಾಣ ಹೆಚ್ಚಿಸಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಮನವಿ ಮಾಡಿಕೊಂಡರು.
ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಜನಸಂಖ್ಯೆ ಹಾಗೂ ಸದಸ್ಯರ ಸಂಖ್ಯೆಯನ್ನು ಆಧರಿಸಿ ಹೆಚ್ಚಿನ ಅನುದಾನ ಒದಗಿಸುವ ಅಗತ್ಯವಿದೆ ಎಂದರು.

ಜಿಲ್ಲೆಯಲ್ಲಿ ಹಾನಿಗೊಳಗಾದ ಎ,ಬಿ ಹಾಗೂ ಸಿ ಕೆಟಗರಿಯಲ್ಲಿ ಒಟ್ಟು ೪೪,೧೬೬ ಮನೆಗಳ ವಿವರವನ್ನು ತಂತ್ರಾಂಶದಲ್ಲಿ ದಾಖಲಿಸಿ ಅನುಮೋದನೆಗೊಂಡಿದ್ದು, ಇದರಲ್ಲಿ ೪೩,೧೭೪ ಫಲಾನಯಭವಿಗಳಿಗೆ ೩೦೧.೪೯ ಕೋಟಿ ರೂಪಾಯಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ವಿವರಿಸಿದರು.

ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಒಟ್ಟು ೩೮
ಜನರು ಮೃತರಾಗಿದ್ದು, ಅದರಲ್ಲಿ ೩೩ ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿಯಂತೆ ಒಟ್ಟು ೧೮೦ ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ತೀವ್ರ ಹಾನಿಗೊಳಗಾದ ವಿದ್ಯುತ್ ಮಗ್ಗಗಳ ನೇಕಾರರ ಪ್ರತಿ ಕುಟುಂಬಕ್ಕೆ ತಲಾ ೨೫ ಸಾವಿರ ರೂಪಾಯಿಗಳಂತೆ ೪೩೫ ಕುಟುಂಬಗಳಿಗೆ ೧೦೮.೭೫ ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿಯು ನೀಡಿದರು.
ಮನೆಹಾನಿಯಾದ ಸ್ಥಳವನ್ನು ಹೊರತುಪಡಿಸಿ ಬೇರೆ ಕಡೆ ಮನೆ ನಿರ್ಮಿಸಿಕೊಳ್ಳಲು ಅನೇಕ ಕುಟುಂಬಗಳು ಮುಂದಾಗಿದ್ದು, ಇದರ ಬಗ್ಗೆ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕಿದೆ.

ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲೆಗೆ ಒಟ್ಟಾರೆ ೮೬೭ ಕೋಟಿ ರೂಪಾಯಿ ಬಿಡುಗಡೆಗೊಂಡಿರುತ್ತದೆ. ಇನ್ನೂ ೩೨೭ ಕೋಟಿ ಉಳಿದಿದೆ. ಸರ್ಕಾರದಿಂದ ಅನುಮೋದನೆಗೊಂಡ ಬಳಿಕ ಉಳಿದ ಹಣವನ್ನು ವೆಚ್ವ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದರು.

ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಲಾಗಿದ್ದು, ನಂತರದ ದಿನಗಳಲ್ಲಿ ಮಳೆಯಿಂದ ಕುಸಿದ ಮನೆಗಳಿಗೆ ಪರಿಹಾರ ನೀಡಿಲ್ಲ. ಆದ್ದರಿಂದ ಮಳೆಯಿಂದ ಹಾನಿಗೊಳಗಾದ ಮನೆಗಳಿಗೂ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ಒತ್ತಾಯಿಸಿದರು.
ಈ ಬಗ್ಗೆ ಈಗಾಗಲೇ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಶೀಘ್ರ ಇದಕ್ಕೆ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ಮನೆಹಾನಿ ಮತ್ತು ಬೆಳೆಪರಿಹಾರ ವಿಮೆ ಅರ್ಹ ಕುಟುಂಬಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಸಮೀಕ್ಷೆಯಿಂದ ಹೊರಗುಳಿದಿರುವ ಹತ್ತು ಸಾವಿರ ಅರ್ಹ ಮನೆಗಳನ್ನು ಈಗಾಗಲೇ ಗುರುತಿಸಿ, ಪರಿಹಾರ ಬಿಡುಗಡೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದಷ್ಟು ಬೇಗನೇ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.
ಬೆಳೆಪರಿಹಾರ; ರಸ್ತೆ ಸುಧಾರಣೆ ಹಾಗೂ ಇತರೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಚುರುಕಿನಿಂದ ಕೈಗೊಳ್ಳಬೇಕು ಎಂದರು.
ಸವದತ್ತಿ ಶಾಸಕ ಆನಂದ ಮಾಮನಿ ಮಾತನಾಡಿ, ಎರಡು ಹೆಕ್ಟೇರ್ ಬೆಳೆಹಾನಿಗೆ ಪರಿಹಾರ ನೀಡಬೇಕು ಎಂಬ ನಿಯಮವಿದ್ದರೂ ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸದೇ ಕಡಿಮೆ ಪರಿಹಾರ ನಿಗದಿಪಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ಶೆಟ್ಟರ್ ಅವರು, ಇತರೆ ಜಿಲ್ಲೆಗಳಲ್ಲಿ ಎರಡು ಹೆಕ್ಟೇರ್ ಪರಿಹಾರ ನೀಡಬಹುದಾಗಿದ್ದರೂ ಅಧಿಕಾರಿಗಳು ಯಾಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.
ಇದೊಂದು ಗಂಭೀರ ವಿಷಯವಾಗಿದ್ದು, ಜಿಲ್ಲಾಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು, ಈ ಸಮಸ್ಯೆ ತಮ್ಮ ಗಮನಕ್ಕೆ ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಜಂಟಿ ಸಮೀಕ್ಷೆ ಪ್ರಕಾರ ಸರ್ಕಾರಕ್ಕೆ ವರದಿ ಕಳಿಸಲಾಗಿದೆ. ಸಾಧ್ಯತೆ ಆಧರಿಸಿ ಮರು ಪರಿಶೀಲನೆ ನಡೆಸಲಾಗುವುದು ಎಂದರು.
ಮನೆಹಾನಿ ಪರಿಹಾರದಿಂದ ವಂಚಿತಗೊಂಡಿರುವ ಅನೇಕ ಕುಟುಂಬಗಳು ಪ್ರತಿದಿನ ಶಾಸಕರ ಮನೆಗೆ ಅಲೆದಾಡುತ್ತಿದ್ದು, ಅಂತಹ ಮನೆಗಳನ್ನು ಮುಂದಿನ ಹಂತದಲ್ಲಿಯಾದರೂ ಗುರುತಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಶಾಸಕರಾದ ಅನಿಲ್ ಬೆನಕೆ ಮತ್ತು ಮಹಾಂತೇಶ ದೊಡ್ಡಗೌಡರ ಒತ್ತಾಯಿಸಿದರು.

ಅಭಯ್ ಪಾಟೀಲ ಮಾತನಾಡಿ, ಮನೆಹಾನಿ ಸಮೀಕ್ಷೆ ಪೂರ್ಣಗೊಂಡಿದ್ದು ಅದನ್ನು‌ ಲಾಗಿನ್ ಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ನಗರದಲ್ಲಿ ಹದಗೆಟ್ಟಿರುವ ರಸ್ತೆ ಸುಧಾರಣೆಗೆ ಹಣವಿದ್ದರೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದನ್ನು ಖಂಡಿಸಿ‌ ಡಿ.೩೧ ರಂದು ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇದಕ್ಕೆ ಉತ್ತರಿಸಿದ ಸಚಿವ ಜಗದೀಶ್ ಶೆಟ್ಟರ್, ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳ ಜತೆ ಮಾತನಾಡಿದ್ದು, ಡಿ.೩೦ ರೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಶಾಸಕ ಮಹೇಶ್ ಕುಮಠಳ್ಳಿ ಮಾತನಾಡಿ, ಪ್ರತಿ ಸಭೆಯಲ್ಲಿ ಸಮಸ್ಯೆಗಳ ಚರ್ಚೆ ಆಗುತ್ತಿದ್ದು, ಚರ್ಚಿಸಿದಂತೆ ಯಾವುದೇ ಕೆಲಸಗಳು ಕಾಲಮಿತಿಯಲ್ಲಿ ಆಗುತ್ತಿಲ್ಲ. ಆದ್ದರಿಂದ ಸಭೆಯಲ್ಲಿ ಚರ್ಚಿಸಲಾಗುವ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಪ್ಪರಗಿ ಬ್ಯಾರೇಜ್ ದುರಸ್ತಿಯ ತುರ್ತು ಅಗತ್ಯವಿದೆ ಎಂದು ಹೇಳಿದರು.
ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಜಿಲ್ಲೆಯಲ್ಲಿ ನಿವೇಶನರಹಿತರನ್ನು ಗುರುತಿಸಿ ನಿವೇಶನ ಹಂಚಿಕೆ ಪ್ರಕ್ರಿಯೆ ನಿರೀಕ್ಷೆಯಂತೆ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಿವೇಶನ ಲಭ್ಯವಿದ್ದರೂ ಅವುಗಳ ಹಂಚಿಕೆ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ದೂರಿದರು.
ದಾಖಲೆರಹಿತ ಜನವಸತಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ವಿವಿಧ ಯೋಜನೆಗಳಡಿ ನಿವೇಶನ ಹಂಚಿಕೆಗೆ ಅವಕಾಶವಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಕೇವಲ ಒಂದು ಎಕರೆ ಪ್ರದೇಶದಲ್ಲಿ ೨೭ ಜನರಿಗೆ ನಿವೇಶನ ಹಂಚಿಕೆ ಪ್ರಕ್ರಿಯೆ ೨೦೧೭ ರಿಂದ ಬಾಕಿ ಉಳಿದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದಲ್ಲದೇ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಲು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಬಡವರಿಗೆ ನೆರವಾಗಲು ಚುರುಕಿನಿಂದ ಕೆಲಸ ಮಾಡಲು ತಿಳಿಸಿದರು.
ಈ ಪ್ರಕರಣ ವಿಳಂಬಕ್ಕೆ ಕಾರಣರಾದವರನ್ನು ತಕ್ಷಣವೇ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಮಹಾಂತೇಶ ಕೌಜಲಗಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಪೊಲೀಸ್ ವರಿಷ್ಢಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *