ಆಗಸ್ಟ್ 27ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಗೆ ಚಾಲನೆ
ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಚಾಲನೆ
ಬೆಂಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ವಿಕಾಸ ಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ನಡೆಸಿದ ಬಳಿಕ ಮಾತನಾಡಿದ ಸಚಿವರು, ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ
ಆಹ್ವಾನ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಚಾಲನೆ ಸಿಗಲಿದ್ದು, ಎಲ್ಲಾ ಗ್ರಾಮ ಪಂಚಾಯ್ತಿ, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು. ಪಂಚಾಯ್ತಿಗೊಬ್ಬರು ನೋಡೆಲ್ ಆಫಿಸರ್‌ಗಳ ನೇಮಕ ಮಾಡಿದ್ದು, ಪಕ್ಷಾತೀತವಾಗಿ ಕಾರ್ಯಕ್ರಮ ಆಯೋಜನೆ, ಎಲ್ಲರೂ ಭಾಗವಹಿಸಬೇಕು ಎಂದು ಸಚಿವರು ಕರೆ ನೀಡಿದರು.
ಬೆಳಗಾವಿಯಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಬೇಕು ಎಂಬುದು ನನ್ನ ಕನಸು. ಈ ಕುರಿತು ಸಿಎಂ, ಡಿಸಿಎಂ ಬಳಿ ಮನವಿ ಸಲ್ಲಿಸಿದೆ. ನನ್ನ ಮನವಿಗೆ ಸ್ಪಂದಿಸಿದ ನಮ್ಮ ನಾಯಕರು ಬೆಳಗಾವಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಸಹಕರಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಸಚಿವರು ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
