ಬೆಳಗಾವಿ: ಭಾರತದ ಹೊಸ ಸಂಸತ್‌ನಲ್ಲಿ ಕಲಾಪದ ಮೊದಲ ದಿನವಾದ ಮಂಗಳವಾರ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಆಗಿರುವುದಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಮಸೂದೆ ಕಡೆಗೂ ಮಂಡನೆಯಾಗಿದ್ದು, ಇದರಿಂದ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ಶಕ್ತಿ ಬಂದಂತಾಗಿದೆ ಎಂದಿದ್ದಾರೆ.
ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿತ್ತು, ಆದರೆ ಪದೇ ಪದೇ ಅದಕ್ಕೆ ತಡೆಯೊಡ್ಡಲಾಗಿತ್ತು. ಇದೀಗ ಸಂಸತ್ ಕಲಾಪದಲ್ಲಿ ಮಸೂದೆಯನ್ನು ಮಂಡಿಸಲಾಗಿದೆ. ಇದನ್ನು ಪಕ್ಷಾತಿತವಾಗಿ ಸ್ವಾಗತಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದರು.
ಈ ವಿಚಾರದಲ್ಲಿ ಯಾವ ಪಕ್ಷಗಳೂ ರಾಜಕೀಯ ಮಾಡಬಾರದು. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳಾ ಪ್ರತಿನಿಧಿಗಳು ಲೋಕಸಭೆ, ವಿಧಾನಸಭೆಗೆ ಆಯ್ಕೆಯಾಗಲು ಎಲ್ಲ ಪಕ್ಷಗಳ ಸಹಕಾರ ಅಗತ್ಯ ಎಂದು ಅವರು ಹೇಳಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಸೋಮವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದರೆ, ಮಂಗಳವಾರ ಲೋಕಸಭೆಯಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ವಿಧೇಯಕವನ್ನು ಮಂಡಿಸಿದರು. .
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ