Breaking News

ಬೆಳಗಾವಿಯಲ್ಲಿ ಪಿಪಿ……ವಾವಾ ಮೀಟೀಂಗ್…!!

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವಾ ಅವರಿಂದ ಪ್ರಗತಿ ಪರಿಶೀಲನೆ
________________________________________
ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಂಡುಬಂದರೆ ಕಠಿಣ ಕ್ರಮ: ಎಚ್ಚರಿಕೆ

ಬೆಳಗಾವಿ, -: ರಾಜ್ಯದ ಕೆಲವೆಡೆ ಇನ್ನೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ಇದೆ ಎಂಬ ವರದಿಗಳು ಆಯೋಗದ ಮುಂದೆ ಇವೆ. ಒಂದು ವೇಳೆ ಇಂತಹ ಪದ್ಧತಿ ಎಲ್ಲಿಯಾದರೂ ಕಂಡುಬಂದರೆ ಸಂಬಂಧಿಸಿದ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ ಈ ಅನಿಷ್ಠ ಪದ್ಧತಿಯ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವಾ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಜು.22) ನಡೆದ ಸಫಾಯಿ ಕರ್ಮಚಾರಿಗಳಿಗೆ‌ ನೀಡಲಾದ ಸಹಾಯ-ಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾನವನ ಮಲ-ಮೂತ್ರಗಳನ್ನು ಕೈಯಿಂದ ಸ್ವಚ್ಛಗೊಳಿಸಿ ಹೊತ್ತು ಸಾಗಿಸುವುದನ್ನು ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಎಂದು ಗುರುತಿಸಲಾಗುತ್ತದೆ.
ಇದೊಂದು ದೌರ್ಜನ್ಯ ಎಂದು ಪರಿಗಣಿಸಿ ಇಂತಹ ಪದ್ಧತಿಯನ್ನು 2013 ರಿಂದ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಆದ್ದರಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಆಗಿದ್ದವರ ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸಲಾಗುತ್ತಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವುದರಿ‌ಂದ ಜಿಲ್ಲೆಯಲ್ಲಿ ಸಿಎಸ್ಆರ್ ಅನುದಾನದಲ್ಲಿ ರೋಬೋಟಿಕ್ ಯಂತ್ರಗಳನ್ನು ಖರೀದಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಅವರು ಸಲಹೆ ನೀಡಿದರು.

ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅನೇಕ ಬಗೆಯ ಆರ್ಥಿಕ ನೆರವು ಮತ್ತು ಸಹಾಯ-ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

ಸಫಾಯಿ ಕರ್ಮಚಾರಿಗಳಿಗೆ ಹಾಗೂ ಅವರ ಅವಲಂಬಿತರಿಗೆ ಸಹಾಯ-ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆಯಿಂದ ಹಿಡಿದು ಬ್ಯಾಂಕಿನಿಂದ ಸೌಲಭ್ಯ ದೊರಕಿಸುವವರಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪ್ರಯತ್ನಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಡಾ.ಪಿ.ಪಿ.ವಾವಾ ಹೇಳಿದರು.

ಹೊರಗುತ್ತಿಗೆ ನೌಕರರಿಗೆ ಅನುಕಂಪದ ನೌಕರಿಗೆ ಅವಕಾಶವಿಲ್ಲ-ಜಿಲ್ಲಾಧಿಕಾರಿ ಸ್ಪಷ್ಟನೆ:

ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವವರು ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ ಅನುಕಂಪ ಆಧಾರದ ಮೇಲೆ ಯಾವ ರೀತಿ ಉದ್ಯೋಗ ನೀಡಲಾಗುತ್ತಿದೆ ಎಂದು ಸಫಾಯಿ ಕರ್ಮಚಾರಿ ಸಂಘದ ಪದಾಧಿಕಾರಿಗಳು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೌಕರ ಮರಣಹೊಂದಿದರೆ ಅವರಿಗೆ ಅನುಕಂಪದ ಆಧಾರದ ಮೇಲೆ ಕಾಯಂ ನೌಕರಿ ನೀಡಲು ಸದ್ಯದ ನಿಯಮಾವಳಿಗಳಲ್ಲಿ ಅವಕಾಶವಿರುವುದಿಲ್ಲ. ಆದರೆ ಅವರ ಕುಟುಂಬದ ಇತರೆ ಸದಸ್ಯರಿಗೆ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗ ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಇರುವ ಪೌರಕಾರ್ಮಿಕರ ವಸತಿಗೃಹಗಳ ಆವರಣದಲ್ಲಿ ಕೆಲಸದ ಬಳಿಕ ಹಿಂದಿರುವ ಪೌರಕಾರ್ಮಿಕರು ಕೈ-ಕಾಲುಗಳನ್ನು ತೊಳೆದುಕೊಳ್ಳಲು ಅನುಕೂಲವಾಗುವಂತೆ ನೀರಿನ ಟ್ಯಾಂಕ್ ಗಳನ್ನು ಅಳವಡಿಸಬೇಕು ಎಂದು ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಹಿರೇಮಠ ಅವರು, ತಕ್ಷಣವೇ ನೀರಿನ ಟ್ಯಾಂಕ್ ನಿರ್ಮಿಸಬೇಕು ಹಾಗೂ ಶೌಚಾಲಯ ಮತ್ತಿತರ ಮೂಲಸೌಕರ್ಯಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆಯ ಆಯುಕ್ತರು ಹಾಗೂ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಸಫಾಯಿ ಕರ್ಮಚಾರಿಗಳ ಜತೆಗೆ ಅವರ ಕುಟುಂಬದ ಸದಸ್ಯರಿಗೂ ಕೂಡ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾರ್ಯ ನಿರ್ವಹಿಸುತ್ತಿದ್ದ 42 ಜನರಿಗೆ ಈಗಾಗಲೇ ತಲಾ 40 ಸಾವಿರ ನೆರವು ನೀಡಲಾಗಿದೆ.
ಎಲ್ಲರಿಗೂ ಗುರುತಿನ ಚೀಟಿ ನೀಡಲಾಗಿದ್ದು, ನರೇಗಾ ಉದ್ಯೋಗ ಚೀಟಿಗಳನ್ನು ಒದಗಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಯಡಿ 23 ಜನರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್ ವಿವರಿಸಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮರುಸಮೀಕ್ಷೆ:

ನಗರ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳು ಇಲ್ಲ ಎಂಬ ವರದಿ ಇತ್ತು. ಆದರೆ ಸಂಘ-ಸಂಸ್ಥೆಗಳ ಒತ್ತಾಯದ ಮೇರೆಗೆ ಮರು ಸಮೀಕ್ಷೆ ನಡೆಸಲಾಗಿದ್ದು, ಸಾಕಷ್ಟು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ‌.ಜಿ.ಹಿರೇಮಠ ತಿಳಿಸಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗುರುತಿಸಲು ಇರಬೇಕಾದ ಮಾರ್ಗಸೂಚಿಗಳ ಗೊಂದಲ ನಿವಾರಿಸಿ ಸಮರ್ಪಕ ಮರು ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಸಫಾಯಿ ಕರ್ಮಚಾರಿಗಳಿಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಒದಗಿಸಲು ನಗರ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಸಫಾಯಿ ಕರ್ಮಚಾರಿಗಳು ಸಲ್ಲಿಸುವ ಯಾವುದೇ ಸಾಲಸೌಲಭ್ಯಗಳ ಅರ್ಜಿಗಳು ತಿರಸ್ಕೃತಗೊಳ್ಳದಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಹುಲ್ ತಿಳಿಸಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಉಮಾ ಸಾಲಿಗೌಡರ ಮತ್ತಿತರರು ಉಪಸ್ಥಿತರಿದ್ದರು.

ಸಫಾಯಿ ಕರ್ಮಚಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಸ್ವಯಂಸೇವಾ ಸಂಘಗಳ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಫಾಯಿ ಕರ್ಮಚಾರಿಗಳಿಗೆ ಸಹಾಯ ಸೌಲಭ್ಯಗಳು ಕಲ್ಪಿಸುವುದು; ಸುರಕ್ಷತಾ ಕ್ರಮಗಳು, ಪುನರ್ವಸತಿ, ಆರೋಗ್ಯ ಸೌಲಭ್ಯಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಪುನರ್ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
*****

Check Also

100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ; 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

ಖಾನಾಪುರ ಜನತೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಳಗಾವಿ, – ಕಾಡಂಚಿನಲ್ಲಿರುವ ಖಾನಾಪುರ ತಾಲ್ಲೂಕಿನ ಜನರಿಗೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.