Breaking News

ಪ್ರವಾಹ…ಮಹಾರಾಷ್ಟ್ರದ ಮಂತ್ರಿ ಜೊತೆ ಸಚಿವ ರಮೇಶ್ ಚರ್ಚೆ

ಬೆಳಗಾವಿ, ಆ.8(ಕರ್ನಾಟಕ ವಾರ್ತೆ): ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು; ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ತುರ್ತು ಸಂದರ್ಭಗಳಲ್ಲಿ ನದಿತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಇಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವ ರಾಜೇಶ್ ಟೋಪೆ ಅವರ ಜತೆ ಚರ್ಚೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪ್ರವಾಹ ಪರಿಸ್ಥಿತಿಯ ಪರಿಶೀಲನೆಗೆ ತೆರಳಿದ ವೇಳೆ ಇಚಕರಂಜಿ ಬಳಿಯ ಪಂಚಗಂಗಾ ನದಿ ಸೇತುವೆ ಮೇಲೆ ಮಹಾರಾಷ್ಟ್ರದ ಸಚಿವರು ಕೂಡ ಸ್ಥಳಕ್ಕೆ ಆಗಮಿಸಿದರು.

ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಗಳು ಭರ್ತಿಯಾದರೆ ನೀರು ಬಿಡುಗಡೆ ಮಾಡುವ ಮುಂಚೆ ಬೆಳಗಾವಿ ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ನೀಡಬೇಕು ಎಂದು ಸಚಿವ ಜಾರಕಿಹೊಳಿ ಮನವಿ ಮಾಡಿಕೊಂಡರು.

ಮುಂಬೈನಲ್ಲಿ ಇತ್ತೀಚೆಗೆ ನಡೆದ ಉಭಯ ರಾಜ್ಯಗಳ ಸಚಿವರು ಮತ್ತು ನೀರಾವರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿರುವಂತೆ ನೀರು ಬಿಡುಗಡೆ ಕುರಿತು ನಿರಂತರವಾಗಿ ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದು ಹೇಳಿದರು.

ಕಳೆದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದರಲ್ಲದೇ ಬಹಳಷ್ಟು ಹಾನಿ ಉಂಟಾಗಿತ್ತು. ಆದ್ದರಿಂದ ಈ ಬಾರಿ ಕರ್ನಾಟಕ ಸರ್ಕಾರದ ವತಿಯಿಂದ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿರುತ್ತದೆ.
ಮಳೆಯ ಪ್ರಮಾಣ, ಜಲಾಶಯಗಳ ಮಟ್ಟ ಮತ್ತು ನೀರು ಬಿಡುಗಡೆಗೆ ಕುರಿತು ಎರಡೂ ರಾಜ್ಯಗಳು ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಪ್ರವಾಹ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಸಚಿವರ ಜತೆ ಚರ್ಚಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮುಂಚೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಜೊಳಿ ಅವರು ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ನೀರಿನ ಹರಿವು ಪರಿಶೀಲಿಸಿದರು.

ನಂತರ ಅಂಕಲಿ, ಯಡೂರ ಗ್ರಾಮದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಇದೇ ವೇಳೆ ಎನ್.ಡಿ.ಆರ್.ಎಫ್. ತಂಡದ ಜತೆ ಬೋಟ್ ನಲ್ಲಿ ಸಂಚರಿಸಿ ತುರ್ತು ಪರಿಸ್ಥಿತಿ ನಿರ್ವಹಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಖುದ್ದಾಗಿ ಮಾಹಿತಿಯನ್ನು ಪಡೆದುಕೊಂಡರು.
ಕಲ್ಲೋಳ-ಯಡೂರ ಬ್ಯಾರೇಜ್, ಶಮನೇವಾಡಿ ಸೇತುವೆ ಸೇರಿದಂತೆ ವಿವಿಧ ಕಡೆ ಸಚಿವರು ಭೇಟಿ ನೀಡಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ಅವರು, “ಕಳೆದ ಬಾರಿಗಿಂತ ಈ ಬಾರಿ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಲ್ಲ. ಆದ್ದರಿಂದ ನದಿತೀರದ ಗ್ರಾಮಸ್ಥರು ಆತಂಕಪಡಬೇಕಿಲ್ಲ” ಎಂದು ಹೇಳಿದರು.

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಅಧಿಕಾರಿಗಳು ನೆರೆಯ ಮಹಾರಾಷ್ಟ್ರದ ಜತೆ ಈ ಬಗ್ಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ನದಿತೀರದ ಗ್ರಾಮಗಳಲ್ಲಿ ಜನರ ತುರ್ತು ರಕ್ಷಣೆಗೆ ಬೋಟ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಳೆದ ವರ್ಷದಂತೆ ಪರಿಹಾರ ಕೇಂದ್ರಗಳ ಆರಂಭಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರಿಗೆ ವಿವರಿಸಿದರು.
ಇದಲ್ಲದೇ ಯಡೂರ ಗ್ರಾಮದಲ್ಲಿ ಎನ್.ಡಿ.ಆರ್.ಎಫ್. ತಂಡ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಹೇಳಿದರು.

ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
****

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *