SSLC ವಿದ್ಯಾರ್ಥಿಗಳ ಕೈ ಹಿಡಿದ “ಗೆಲುವಿನತ್ತ ನಮ್ಮ ಪಯಣ” ಪುಸ್ತಕ
ಸತೀಶ್ ಜಾರಕಿಹೊಳಿ ಫೌಂಡೇಶನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯಪಡಿಸಿದ ವಿದ್ಯಾರ್ಥಿಗಳು
ಬೆಳಗಾವಿ: ವಿದ್ಯಾರ್ಥಿ ಜೀವನದ ಮಹತ್ವದ ಕಾಲಘಟ್ಟ ಎನಿಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.
ಶೈಕ್ಷಣಿಕವಾಗಿ ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಂದು ವಿಂಗಡಿಸಲಾಗಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಎ ಗ್ರೇಡ್ ನಲ್ಲಿ ಸಾಧನೆ ಮಾಡಿವೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 7,30,881 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 85.63 ಒಟ್ಟಾರೆ ಫಲಿತಾಂಶವಾಗಿದೆ. ಆದರೆ ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 144 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಅದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ 10 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಬೆಳಗಾವಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದೃಷ್ಟಿಯಿಂದ ಅನುಕೂಲವಾಗಲೆಂದು ಕನ್ನಡ, ಇಂಗ್ಲೀಷ್, ಮರಾಠಿ, ಉರ್ದು ಭಾಷೆಗಳಲ್ಲಿ “ಗೆಲುವಿನತ್ತ ನಮ್ಮ ಪಯಣ” ಎಂಬ ಪುಸ್ತಕವನ್ನು ಮುದ್ರಿಸಿ, ಸುಮಾರು 68,419 ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದ್ದರು.
“ಗೆಲುವಿನತ್ತ ನಮ್ಮ ಪಯಣ ಪುಸ್ತಕ” ವನ್ನು ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಮೊಬೈಲ್ ನಲ್ಲಿ ಓದಲು ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಪುಸ್ತಕವನ್ನು (PDF) ಮಾಡಿ ಲಿಂಕ್ ಸೇರ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆಯ ವಿವಿಧ ಶಾಲೆಗಳಿಗೆ ಹೋಗಿ ಪುಸ್ತಕಗಳನ್ನು ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ, ಪ್ರಿಯಂಕಾ ಜಾರಕಿಹೊಳಿ ಅವರು ಈ ಒಂದು ಕಾರ್ಯಕ್ಕೆ ಸಾಥ್ ನೀಡಿದ್ದರು. ಕೆಲ ವಿದ್ಯಾರ್ಥಿಗಳು ಮತ್ತು ಪಾಲಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸತೀಶ್ ಜಾರಕಿಹೊಳಿ ಫೌಂಡೇಶನ್ ನೀಡಿದ “ಗೆಲುವಿನತ್ತ ನಮ್ಮ ಪಯಣ ಪುಸ್ತಕ” ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಬೆಳಗಾವಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ SSLC ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಗಿತ್ತು. ಕಾರಣ ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ SSLC ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು ಸಂತಸ ತಂದಿದೆ. ಮುಂದೆಯೂ ಪುಸ್ತಕ ವಿತರಣೆ ಕಾರ್ಯ ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆ ಇದೆ. -ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಯಮಕನಮರಡಿ.