ಯಮಕನಮರಡಿ : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ಭೇಟಿ ನೀಡಿ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪರಿಶೀಲಿಸಿದರು.
ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿ ದಿನ ಹೆಚ್ಚಳವಾಗುತ್ತಿದೆ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಹಲವು ಕಡೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಇಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಏನೇ ಪರಿಕರಗಳು ಬೇಕಾದರೂ ತಕ್ಷಣ ನಮಗೆ ಕರೆ ಮಾಡಿ. ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ನಿಮಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು. ಆಸ್ಪತ್ರೆಯಲ್ಲಿರುವ ರೋಗಿಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.
ಇದಕ್ಕೂ ಮೊದಲು ಯಮಕನಮರಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಧಿಕಾರಿಗಳು, ಗ್ರಾಪಂ. ಸದಸ್ಯರೊಂದಿಗೆ ಸತೀಶ್ ಜಾರಕಿಹೊಳಿ ಸಭೆ ನಡೆಸಿ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಜಿಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಗಣಿ ದರ್ಗಾ , ಕಿರಣ ರಜಪೂತ, ಮಾಹಾಂತೇಶ ಮಗದುಮ್ಮ, ದಸ್ತಗಿರ ಬಸಾಪೂರಿ, ವಂದನಾ ತುಬಚಿ, ಜಾವೀದ್ ಜಖಾತಿ, ಅಸ್ಲಾಂ ಪಕಾಳಿ, ರವಿ ಜೀಂದ್ರಾಲಿ, ಈರಣ್ಣ ಸೇರಿ ಇತರರು ಇದ್ದರು.