ಬೆಂಗಳೂರು, ಜೂನ್ 03: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು .
ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ಖುದ್ದಾಗಿ ಪರಿಶೀಲಿಸುವುದಾಗಿ ಅವರು ಎಚ್ಚರಿಸಿದರು.
ಪ್ರವಾಹದಿಂದ ಹಾಳಾದ ರಸ್ತೆ/ಸೇತುವೆಗಳ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದ್ದು, ಪ್ರವಾಹದಿಂದ ಹಾಳಾಗಿರುವ 1800 ರಸ್ತೆ ಕಾಮಗಾರಿಗಳ ಪೈಕಿ 1700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ/ ದುರಸ್ಥಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇಂಜಿನಿಯರ್‍ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್‍ಗಳನ್ನು ಟ್ರೈನಿಗಳೆಂದು ನೇಮಕ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿದರು.
ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ 1650 ಕಿ.ಮೀ ಉದ್ದದ ಗ್ರಾಮೀಣ ರಸ್ತೆ ಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕೆರೆ, ಹಳ್ಳ ಹಾಗೂ ನದಿಪಾತ್ರದ ಮಣ್ಣನ್ನು ರಸ್ತೆ ಕಾಮಾಗಾರಿಗಳೀಗೆ ಉಪಯೋಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯಾದ್ಯಾಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ. ಏಕರೂಪ ದರಪಟ್ಟಿ ಹೊರಬಂದಲ್ಲಿ ಇಲಾಖೆಗೆ ನೂರಾರು ಕೋಟಿ ರೂ.ಗಳನ್ನು ಸರ್ಕಾರಕ್ಕೆ ಉಳಿಸಬಹುದಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ರಾಜ್ಯದಲ್ಲಿ ಒಟ್ಟು 4813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30675 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸೇತುವೆಗಳ ತಳಭಾಗದಲ್ಲಿ ಒಂದು ಮೀಟರ್ ತಡೆಗೋಡೆ ನಿರ್ಮಿಸಿ ನೀರಿನ ಸಂಗ್ರಹಣೆ ಮಾಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.