ಬೆಳಗಾವಿ : ವಿಧಾನ ಪರಿಷತ್ತಿನಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಕೂಡಲೇ ಸಿ.ಟಿ.ರವಿ ಅವರ ಸದಸ್ಯತ್ವ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಕೆಟ್ಟ ಶಬ್ದ ಬಳಿಸಿ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹೆಬ್ಬಾಳಕರ್ ಅಭಿಮಾನಿಗಳು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ,ಸಿಟಿ ರವಿ ಕಾರಿಗೆ ಘೇರಾವ್ ಹಾಕಿ, ಸಿಟಿ ರವಿ ಮೇಲೆ ಹಲ್ಲೆ ಮಾಡುವ ಪ್ರಯತ್ನವನ್ನು ಮಾಡುವ ಮೂಲಕ ಸಿಟಿ ರವಿ ವಿರುದ್ಧ ಸಿಡಿದೆದ್ದ ಅಭಿಮಾನಿಗಳು ನಾಳೆ ಶನಿವಾರ ಬೆಳಗಾವಿ ಮಹಾನಗರದಲ್ಲಿ ಸಿಟಿ ರವಿ ಸದಸ್ಯತ್ವವನ್ನು ರದ್ದು ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಮಾಜಿ ಬುಡಾ ಅಧ್ಯಕ್ಷ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ ಕದಂ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನೆ ಆಯೋಜಿಸಲು ನಿರ್ಧರಿಸಿದ್ದಾರೆ.
ಶನಿವಾರ ಬೆಳಗ್ಗೆ 11 ಗಂಟೆಗೆ ಸಿಪಿಎಡ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಆಯೋಜಕರು ಕೋರಿದ್ದಾರೆ.